ಹೊಳೆನರಸೀಪುರ, ಜು.23: ತಾಲೂಕಿನ ಅತ್ತಿಚೌಡೇನಹಳ್ಳಿ ಗ್ರಾಮದ ಸೇತುವೆ ಸಮೀಪ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಚಾಕು ತೋರಿಸಿ ಸುಮಾರು 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ದೋಚಿದ ಘಟನೆ ನಡೆದಿದೆ.
ಕಲ್ಲೇನಹಳ್ಳಿ ಗ್ರಾಮದ ನಿವಾಸಿ ದಿವ್ಯ ಅವರು ತಮ್ಮ ತೋಟಕ್ಕೆ ನೀರು ಬಿಡಲು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ಎರಡು ಡಿಯೋ ಸ್ಕೂಟಿಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
ಬಳಿಕ ಚಾಕು ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪಿಗಳು, ಅವರ ಕತ್ತಿನಲ್ಲಿದ್ದ ಸುಮಾರು 30 ಗ್ರಾಂ ತೂಕದ, ಅಂದಾಜು ₹1.50 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.
ಆರೋಪಿಗಳು ಕಪ್ಪು ಬಣ್ಣದ ಜಾಕೆಟ್, ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿದ್ದರಿಂದ ಅವರನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಹಗಲು ವೇಳೆಯಲ್ಲೇ ನಡೆದ ಈ ದರೋಡೆ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಗ್ರಾಮೀಣ ರಸ್ತೆಗಳು ಹಾಗೂ ನಿರ್ಜನ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.