ಕೊರಟಗೆರೆ:- ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಕಲಘಟ್ಟ ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ ಓವರ್ಹೆಡ್ ನೀರಿನ ಟ್ಯಾಂಕ್ಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಜಾಗದಲ್ಲಿ ಟ್ಯಾಂಕ್ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮದ ಮಧ್ಯಭಾಗದಲ್ಲಿರುವ ಅಂಗನವಾಡಿ ಕೇಂದ್ರದ ಸಮೀಪದ ಜಾಗದಲ್ಲಿ ಓವರ್ಹೆಡ್ ಟ್ಯಾಂಕ್ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ, ಇದೇ ಜಾಗದಲ್ಲಿ ನಿವೇಶನ ರಹಿತ ಬಡ ವಿಧವೆ ಮಂಜಮ್ಮ ಅವರು ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಹಿನ್ನೆಲೆಯಲ್ಲಿ, ಕಾಮಗಾರಿಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ವಾಸಿಸುವ ಕರಕಲಘಟ್ಟ ಗ್ರಾಮಕ್ಕೆ ಭವಿಷ್ಯದ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಿದರೆ ಗ್ರಾಮಸ್ಥರಿಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಸಾರ್ವಜನಿಕ ಬಳಕೆಗೆ ಸೂಕ್ತವಾದ ಈ ಜಾಗವನ್ನು ಉಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರಕಲಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಮಂಜುನಾಥ್ ಮಾತನಾಡಿ ಗ್ರಾಮದ ಹೊರವಲಯದಲ್ಲಿ ನಾಲ್ಕೈದು ಸರ್ಕಾರಿ ಜಾಗಗಳು ಲಭ್ಯವಿದ್ದು, ಅಲ್ಲಿಯೇ ಜೆಜೆಎಂ ಓವರ್ಹೆಡ್ ಟ್ಯಾಂಕ್ ನಿರ್ಮಿಸಬಹುದು. ಗ್ರಾಮದ ಮಧ್ಯಭಾಗದಲ್ಲಿರುವ ಈ ಜಾಗವನ್ನು ಸಮುದಾಯ ಭವನ ನಿರ್ಮಾಣಕ್ಕೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ .

ಗ್ರಾಮದ ಮಧ್ಯಭಾಗದಲ್ಲಿ ಟ್ಯಾಂಕ್ ನಿರ್ಮಿಸಿದರೆ ಸಾರ್ವಜನಿಕ ಬಳಕೆಯ ಅಮೂಲ್ಯ ಜಾಗ ಕಳೆದುಹೋಗಲಿದ್ದು, ಮುಂದಿನ ದಿನಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ ನಿರ್ಗತಿಕ ಮಹಿಳೆಯೊಬ್ಬರ ಗುಡಿಸಲು ತೆರವುಗೊಳಿಸಿ ಕಾಮಗಾರಿ ಕೈಗೊಳ್ಳುವುದು ಮಾನವೀಯ ದೃಷ್ಟಿಯಿಂದಲೂ ಸಮಂಜಸವಲ್ಲ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಗ್ರಾಮದ ಹೊರಭಾಗದಲ್ಲಿ ಲಭ್ಯವಿರುವ ಸೂಕ್ತ ಸರ್ಕಾರಿ ಜಾಗದಲ್ಲಿ ಓವರ್ಹೆಡ್ ಟ್ಯಾಂಕ್ ನಿರ್ಮಿಸಿ, ಗ್ರಾಮದ ಮಧ್ಯಭಾಗದ ಜಾಗವನ್ನು ಸಮುದಾಯದ ಹಿತಕ್ಕಾಗಿ ಉಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ
