ರಾಮನಾಥಪುರ, ಜು.27: ಕೊಡಗಿನ ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ, ಕಟ್ಟೇಪುರ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟೆಗಳ ಸೀಳು ನಾಲೆಗಳ ಮೂಲಕ ತಕ್ಷಣ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸುವಂತೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಪರಿಸರಕ್ಕಾಗಿ ನಾವು ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ. ರಾಮಸ್ವಾಮಿ ಸರ್ಕಾರವನ್ನು ಆಗ್ರಹಿಸಿದರು.
ರಾಮನಾಥಪುರದಲ್ಲಿ ಕಾವೇರಿ ನದಿಯ ನೀರಿನ ಹರಿವನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿ ಹಾಗೂ ಮತ್ತೊಂದೆಡೆ ಅನಾವೃಷ್ಟಿಯಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಮತ್ತು ಗ್ರಾಮೀಣ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಲಭ್ಯವಿರುವ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕೊಡಗಿನ ಹಾರಂಗಿ ಜಲಾಶಯ ಭರ್ತಿಯಾಗಿರುವ ಕಾರಣ ನಾಲ್ಕು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಈ ನೀರನ್ನು ಸೀಳು ನಾಲೆಗಳ ಮೂಲಕ ಹರಿಸಿದರೆ ಹಾಸನ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಕೆರೆ-ಕಟ್ಟೆಗಳು ತುಂಬಲಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಜಾನುವಾರುಗಳಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗದ್ದೆಗಳಲ್ಲಿ ಬತ್ತದ ಬದಲಾಗಿ ದ್ವಿದಳ ಧಾನ್ಯಗಳಂತಹ ಪರ್ಯಾಯ ಬೆಳೆಗಳನ್ನು ಬೆಳೆಯಲು ಸಹ ನೀರಿನ ಲಭ್ಯತೆ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರ ಕೂಡಲೇ ಎಲ್ಲಾ ಸೀಳು ನಾಲೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕುಡಿಯುವ ನೀರು ಹಾಗೂ ರೈತರ ಹಿತದೃಷ್ಟಿಯಿಂದ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಗಂಗೂರು ಶಂಕರೇಗೌಡ, ರಾಮನಾಥಪುರ ಹೊನ್ನೇಗೌಡ, ಹಂಪಾಪುರ ಸ್ವಾಮಿಗೌಡ, ನಿವೃತ್ತ ಇಂಜಿನಿಯರ್ ರಾಜೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
