ರಾಮನಾಥಪುರ, ಜು.27: ಶರಣರ ವಚನಗಳು ಸಾಹಿತ್ಯ, ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತುವ ಶಕ್ತಿಯನ್ನು ಹೊಂದಿವೆ. ವಿದ್ಯಾರ್ಥಿಗಳು ವಚನಗಳನ್ನು ಕಂಠಪಾಠ ಮಾಡಿಕೊಂಡರೆ ಅವರ ಭವಿಷ್ಯಕ್ಕೆ ಉತ್ತಮ ಮಾರ್ಗದರ್ಶನವಾಗಲಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಹೇಳಿದರು.
ರಾಮನಾಥಪುರ ಹೋಬಳಿಯ ಬಸವಪಟ್ಟಣದ ಎಚ್.ಎಂ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸುತ್ತೂರು ಜೆಎಸ್ಎಸ್ ಮಠದ ಹಿಂದಿನ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣ ಸಂಸ್ಥೆಗಳು ಮತ್ತು ಶರಣ ಸಾಹಿತ್ಯ ಪರಿಷತ್ತಿನ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕಳೆದ 20 ವರ್ಷಗಳಿಂದ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗ ಜಿಲ್ಲೆಯಲ್ಲಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಎ. ಮಂಜು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಸನ ಜಿಲ್ಲಾ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ನೀಡುವ ಮೂಲಕ ಶರಣರ ತತ್ವ, ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಂ.ಆರ್. ಹರೀಶ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹೇಂದ್ರಕುಮಾರ್, ಅಧ್ಯಕ್ಷ ಬಿ.ಕೆ. ಹರೀಶ್, ಭಕ್ತ ಬಳಗದ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಸಮಿತಿ ಸದಸ್ಯರಾದ ಜಯಶಂಕರ್, ನಿರ್ವಣೇಗೌಡ, ಪುಟ್ಟರಾಜು, ರಾಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
