ಮೂಡಿಗೆರೆ, ಆ.1: ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಮಹನೀಯರ ಆದರ್ಶಗಳನ್ನು ಬೆಳೆಸುವ ಉದ್ದೇಶದಿಂದ ಮೂಡಿಗೆರೆಯ ಜೆ.ಎಸ್. ಶಾಲೆಯಲ್ಲಿ ಶನಿವಾರ ದೇಶಭಕ್ತಿ ಛದ್ಮವೇಶ ಸ್ಪರ್ಧೆಯನ್ನು ಅದ್ದೂರಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಹಾಸ್ಯ ಕಾರ್ಯಕ್ರಮ “ಮಜಾ ಭಾರತ” ಖ್ಯಾತಿಯ ಹಾಸ್ಯನಟಿ ಶ್ರೀಮತಿ ಮಧುಚಂದ್ರ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕವಾಗಿ ಮಾತನಾಡಿದರು. ದೇಶಭಕ್ತಿ, ಶಿಸ್ತು ಮತ್ತು ಆತ್ಮವಿಶ್ವಾಸವು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು. ಮತ್ತೋರ್ವ ತೀರ್ಪುಗಾರರಾಗಿ ಶ್ರೀಮತಿ ಆಶಲತಾ ಸೇವೆ ಸಲ್ಲಿಸಿದರು.
ಜೆ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಮೊಹಮ್ಮದ್ ಇಮ್ರಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಧೈರ್ಯ, ರಾಷ್ಟ್ರನಾಯಕರ ಆದರ್ಶಗಳು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದರು.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ರಾಣಿ ಲಕ್ಷ್ಮೀಬಾಯಿ ಸೇರಿದಂತೆ ವಿವಿಧ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ರಾಷ್ಟ್ರ ನಾಯಕರ ವೇಷಭೂಷಣಗಳನ್ನು ಧರಿಸಿ ಗಮನ ಸೆಳೆದರು. ತಮ್ಮ ಅದ್ಭುತ ಅಭಿನಯ, ಸಂಭಾಷಣೆ ಹಾಗೂ ದೇಶಭಕ್ತಿ ಸಂದೇಶಗಳ ಮೂಲಕ ನೆರೆದಿದ್ದ ಪೋಷಕರು ಮತ್ತು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದೇಶಭಕ್ತಿ ಛದ್ಮವೇಶ ಸ್ಪರ್ಧೆಯನ್ನು ಯಶಸ್ವಿಗೊಳಿಸಿದರು.
