ಹಾಸನ: ನಗರದ ಎಸ್ಬಿಎಂ ಬಡಾವಣೆಯ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ಉದ್ದಕ್ಕೂ ನಿರ್ಮಾಣವಾಗಿರುವ ಗುಂಡಿಗಳಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವಭಯದಲ್ಲಿ ಸಂಚರಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಡಾವಣೆಯ ಪ್ರಮುಖ ಸಂಪರ್ಕ ರಸ್ತೆಯಾಗಿರುವುದರಿಂದ ಪ್ರತಿದಿನ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ಆದರೆ ರಸ್ತೆ ಹಾಳಾಗಿರುವ ಕಾರಣ ದ್ವಿಚಕ್ರ ವಾಹನ ಸವಾರರು ಜಾರಿ ಬೀಳುವ ಅಪಾಯ ಹೆಚ್ಚಿದ್ದು, ಮಳೆ ಬಂದಾಗ ಗುಂಡಿಗಳು ನೀರಿನಿಂದ ತುಂಬಿ ಮತ್ತಷ್ಟು ಅಪಾಯಕಾರಿಯಾಗುತ್ತಿವೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ರಸ್ತೆಗೆ ಪ್ಯಾಚ್ವರ್ಕ್ ಮಾಡಿಕೊಡುವಂತೆ ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪಘಾತ ಸಂಭವಿಸುವ ಮುನ್ನವೇ ಎಸ್ಬಿಎಂ ಬಡಾವಣೆಯ ಮುಖ್ಯರಸ್ತೆಗೆ ತುರ್ತು ಪ್ಯಾಚ್ವರ್ಕ್ ನಡೆಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ನಿವಾಸಿಗಳು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
