ಕೊರಟಗೆರೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಸಮುದಾಯ ಭವನದಲ್ಲಿ 2026-27ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 130 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಾಲ್ಲೂಕಿನ 45 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, 11 ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಹಾಗೂ ಶ್ರೀ ಮಹಾಲಕ್ಷ್ಮಿ ವಿದ್ಯಾಮಂದಿರದ 1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೈಕಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ದುಡ್ಡನಹಳ್ಳಿ ಶಾಲೆಯ ಶಿಕ್ಷಕ ರಿಜ್ವಾನ್ ಭಾಷಾ ಸಾಹೇಬ್ ಮಾತನಾಡಿ, ರಾಜ್ಯದ ಬಹುತೇಕ ಕಡೆಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಿಕ್ಷಕರು ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಕರೆತರುವ ಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದರಿಂದ ಮಾತ್ರ ತಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳು 10ನೇ ತರಗತಿಯವರೆಗೆ ಪಾಲಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿರುತ್ತಾರೆ. ನಂತರ ಅವರ ಜೀವನದಲ್ಲಿ ಹಲವು ಬದಲಾವಣೆಗಳು ಸಂಭವಿಸುವುದರಿಂದ, ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯದ ಬಗ್ಗೆ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಕ್ಷೇತ್ರವು ಧಾರ್ಮಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಕ್ಷೇತ್ರದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ವರ್ಷಕ್ಕೊಮ್ಮೆ ಪ್ರತಿಭಾ ಪುರಸ್ಕಾರ, ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಶಿಬಿರ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಾಸುದೇವ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಉತ್ತಮ ಅಂಕ ಗಳಿಸುವ ಸಾಮರ್ಥ್ಯವಿರುತ್ತದೆ. ಆದರೆ ಎಲ್ಲರೂ ಅದನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. 10ನೇ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ಪ್ರತಿಭಾ ಪುರಸ್ಕಾರ ಪಡೆದಿರುವುದು ಸಂತಸದ ಸಂಗತಿಯಾದರೂ, ಇದನ್ನೇ ಅಂತಿಮ ಸಾಧನೆ ಎಂದು ಭಾವಿಸಬಾರದು. ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಹಾಗೂ ಶ್ರದ್ಧೆಯಿಂದ ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಮುರಳಿಕೃಷ್ಣ, ಖಜಾಂಚಿ ಜಗದೀಶ್, ಧರ್ಮದರ್ಶಿಗಳಾದ ಲಕ್ಷ್ಮಿಕಾಂತ್, ನಟರಾಜು, ಶ್ರೀಪ್ರಸಾದ್, ರವಿರಾಜೇ ಅರಸ್, ಮಂಜುನಾಥ್, ಲಕ್ಷ್ಮಿನರಸಯ್ಯ, ನರಸರಾಜು, ಓಂಕಾರೇಶ್ವರ, ನಾಗರಾಜು, ಬಾಲಕೃಷ್ಣ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ವಿಶೇಷ ಅಧಿಕಾರಿ ಕೇಶವಮೂರ್ತಿ, ಶಿಕ್ಷಣ ಇಲಾಖೆಯ ಅನುಸೂಯ, ಬಿಆರ್ಸಿ ಗಂಗಮ್ಮ, ಮುಖ್ಯ ಶಿಕ್ಷಕ ಸೋಮಶೇಖರ್ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ: ನರಸಿಂಹಯ್ಯ ಹೊಸಕೋಟೆ
