ಕೊರಟಗೆರೆ: ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 20 ವರ್ಷಗಳ ಕಾಲ ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದ ಜಿಪಂ ಮಾಜಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿ.ಎನ್. ಕೃಷ್ಣಮೂರ್ತಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಮುಂಬರುವ ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ತಮ್ಮ ಗುರಿ ಎಂದು ತಿಳಿಸಿದರು.
ಕೊರಟಗೆರೆ ಕ್ಷೇತ್ರ ಜೆಡಿಎಸ್ನ ಭದ್ರಕೋಟೆಯಾಗಿದ್ದು, ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಅವರು ಮೂರು ಬಾರಿ ಹಾಗೂ ಪಿ.ಆರ್. ಸುಧಾಕರ್ಲಾಲ್ ಅವರು ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿ ಮತ್ತೆ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ತೊರೆದು ಆಗಸ್ಟ್ 8ರಂದು ಬೆಂಗಳೂರಿನ ಜೆ.ಪಿ. ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಜನರು ಬೇಸರಗೊಂಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕೃಷ್ಣಮೂರ್ತಿ ಹೇಳಿದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಮರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ನಾಯಕತ್ವದ ಕೊರತೆ ಇತ್ತು. ಇದೀಗ ಪಿ.ಎನ್. ಕೃಷ್ಣಮೂರ್ತಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ಸಂಘಟನೆಗೆ ಮತ್ತಷ್ಟು ಬಲ ಬಂದಿದೆ. ಅವರ ನೇತೃತ್ವದಲ್ಲಿ ಪಕ್ಷವನ್ನು ಸಂಘಟಿಸಿ, ಸ್ಥಳೀಯ ಚುನಾವಣೆಗಳಲ್ಲಿಯೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ ಎಂದರು.

ಮಾಜಿ ಅಧ್ಯಕ್ಷ ಜೆ.ಎನ್. ನರಸಿಂಹರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ. ತಾಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷರಾಗಿದ್ದಾರೆ. ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿಯೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಲಕ್ಷ್ಮೀಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ರಮೇಶ್, ಮಾವತ್ತೂರು ಮಂಜುನಾಥ್, ಮಾಜಿ ಅಧ್ಯಕ್ಷರಾದ ನಾಗರಾಜು ಹಾಗೂ ರಂಗಯ್ಯ, ಅಶ್ವತ್ಥನಾರಾಯಣರಾಜು, ಕೆ.ಎನ್. ಲಕ್ಷ್ಮೀನಾರಾಯಣ್, ಪುಟ್ಟನರಸಪ್ಪ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಂತೋಷ್ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ನರಸಿಂಹಯೃಹೊಸಕೋಟೆ
