ಚನ್ನರಾಯಪಟ್ಟಣ, ಆ.15: ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್. ಹರೀಶ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶದ ಆಡಳಿತ ವ್ಯವಸ್ಥೆ ಹೇಗೆ ಸಾಗಬೇಕು ಎಂಬುದನ್ನು ಸಂವಿಧಾನದ ಮೂಲಕ ಸ್ಪಷ್ಟವಾಗಿ ತಿಳಿಸಿಕೊಟ್ಟಿದ್ದಾರೆ. ಸಂವಿಧಾನದ ಆಶಯಗಳನ್ನು ಗೌರವಿಸಿ, ಅದರ ಮೌಲ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಕ ಬಿ.ಬಿ. ಗೌಡ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗಿರೀಶ್, ಕಚೇರಿ ವ್ಯವಸ್ಥಾಪಕಿ ವೀಣಾ, ಅಧಿಕಾರಿಗಳಾದ ಸವಿತಾ, ಜಯರಾಮ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಲ್.ಪಿ. ಪ್ರಕಾಶ್, ಸದಸ್ಯರಾದ ಕೆ.ಎನ್. ನಾಗೇಶ್, ಕಬ್ಬಾಳ್ ಮಹೇಶ್, ಅರಳಾಪುರ ನಾಗೇಶ್, ಎಸ್.ಎಂ. ಜನಾರ್ಧನ್, ತೇಜಾ, ವಕೀಲ ನವೀನ್ ಕುಮಾರ್ ಸೇರಿದಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ
