ಚನ್ನರಾಯಪಟ್ಟಣ, ಆ.15: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕರಾಟೆ ಪಟು ಮಾಸ್ಟರ್ ಸಿದ್ಧಾರ್ಥ್ ಎಂ. ಚಕ್ರವರ್ತಿ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಸಿದ್ಧಾರ್ಥ್ ಅವರನ್ನು ಸನ್ಮಾನಿಸಿದರು. ಚನ್ನರಾಯಪಟ್ಟಣದ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಿದ್ಧಾರ್ಥ್, ಕರಾಟೆ ಶಿಕ್ಷಕರಾದ ನಟರಾಜು ಹಾಗೂ ಮಾಲತೇಶ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆದ ಕರಾಟೆ ಚಾಂಪಿಯನ್ಶಿಪ್ಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೈಸೂರಿನಲ್ಲಿ ನಡೆದ 30ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ತೃತೀಯ, ಹಾಸನದಲ್ಲಿ ನಡೆದ 31ನೇ ರಾಷ್ಟ್ರಮಟ್ಟದ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಹಾಗೂ ಅರಕಲಗೂಡಿನಲ್ಲಿ ನಡೆದ 32ನೇ ರಾಷ್ಟ್ರಮಟ್ಟದ ಚಾಂಪಿಯನ್ಶಿಪ್ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೃಷ್ಣರಾಜಪೇಟೆಯಲ್ಲಿ ನಡೆದ ರಾಜ್ಯಮಟ್ಟದ ಕಾವೇರಿ ಕರಾಟೆ ಚಾಂಪಿಯನ್ಶಿಪ್ನಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಅವರ ಕ್ರೀಡಾ ಸಾಧನೆಯನ್ನು ಗುರುತಿಸಿ ತಾಲೂಕು ಆಡಳಿತ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗೌರವಿಸಿದೆ.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ತಾಲೂಕು ಪಂಚಾಯಿತಿ ಇಒ ಜಿ.ಆರ್. ಹರೀಶ್, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ್, ಬಿಇಒ ಸತೀಶ್, ಸರ್ಕಲ್ ಇನ್ಸ್ಪೆಕ್ಟರ್ ರಘುಪತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ
