ಚನ್ನರಾಯಪಟ್ಟಣ: ಪಟ್ಟಣದ ಮಿನಿ ವಿಧಾನಸೌಧದ ಎದುರು ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 12 ಅಡಿ ಎತ್ತರದ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮವು ಮುಂಗಾರು ಅಧಿವೇಶನ ಮುಗಿದ ನಂತರ ನಡೆಯಲಿದೆ ಎಂದು ದಲಿತಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.
ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ತಾಲೂಕು ಅಧ್ಯಕ್ಷ ಹಿರಿಬಿಳ್ತಿ ಮಂಜುನಾಥ್ ಮಾತನಾಡಿ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಸಹಕಾರದಿಂದ 2025ರ ನವೆಂಬರ್ ತಿಂಗಳಲ್ಲಿ ಸಂವಿಧಾನ ಶಿಲ್ಪಿ, ವಿಶ್ವರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ತಾಲೂಕು ಕಚೇರಿ ಮುಂಭಾಗದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.
ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸಚಿವರನ್ನು ಆಹ್ವಾನಿಸಿ ಪ್ರತಿಮೆ ಅನಾವರಣಗೊಳಿಸಲು ನಿರ್ಧರಿಸಲಾಗಿತ್ತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೂ ಆಹ್ವಾನ ನೀಡಲಾಗಿತ್ತು. ಆದರೆ, ತಾಲೂಕಿನ ಕೆಲ ದಲಿತಪರ ಸಂಘಟನೆಗಳಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.
ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜಿಲ್ಲೆಯವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಮುಂಗಾರು ಅಧಿವೇಶನ ಮುಗಿದ ಬಳಿಕ ಹಾಸನ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಪ್ರತಿಮೆ ಅನಾವರಣದ ದಿನಾಂಕ ನಿಗದಿಪಡಿಸುವಂತೆ ಸ್ಥಳೀಯ ಶಾಸಕರಿಗೆ ಎಲ್ಲಾ ದಲಿತಪರ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ. ಇದಕ್ಕೆ ಶಾಸಕರು ಪೂರಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಪ್ರತಿಮೆ ಅನಾವರಣ ವಿಳಂಬಕ್ಕೆ ತಾಲೂಕು ಆಡಳಿತ ಕಾರಣವಲ್ಲ:
ಡಾ. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ವಿಳಂಬವಾಗಲು ತಾಲೂಕು ಆಡಳಿತದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಹಿರಿಬಿಳ್ತಿ ಮಂಜುನಾಥ್ ಸ್ಪಷ್ಟಪಡಿಸಿದರು.
ದಲಿತ ಮುಖಂಡ ಹಾಗೂ ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಲ್. ಲಕ್ಷ್ಮಣ್ ಮಾತನಾಡಿ, ಪ್ರತಿಮೆಯನ್ನು ತಂದು ಸುಮಾರು 10 ತಿಂಗಳು ಕಳೆದಿದ್ದರೂ ಇದುವರೆಗೆ ಅನಾವರಣಗೊಳ್ಳದಿರುವುದು ಎಲ್ಲರಲ್ಲೂ ನೋವು ಮೂಡಿಸಿದೆ. ಸರ್ಕಾರದ ಮಟ್ಟದಲ್ಲಿ ನಡೆದ ಕೆಲವು ಬೆಳವಣಿಗೆಗಳಿಂದ ಕಾರ್ಯಕ್ರಮ ವಿಳಂಬವಾಗಿತ್ತು. ಇದೀಗ ಎಲ್ಲ ಅಡೆತಡೆಗಳು ನಿವಾರಣೆಯಾಗಿದ್ದು, ಇನ್ನೊಂದು ವಾರದಲ್ಲಿ ದಿನಾಂಕ ನಿಗದಿಪಡಿಸಿ ಅತ್ಯಂತ ವಿಜೃಂಭಣೆಯಿಂದ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದಲಿತಪರ ಸಂಘಟನೆಗಳ ಮುಖಂಡರಾದ ಸಿ.ಪಿ. ಮಂಜುನಾಥ್, ತಗ್ಯಮ್ಮ ಬಡಾವಣೆ ನವೀನ್, ರವಿ ಕುಂಬಾರಹಳ್ಳಿ, ಎ.ಕೆ. ಕಾಲೋನಿ ಕೃಷ್ಣ, ಇಮ್ರಾನ್ ಪಾಷ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ : ಐ ಕೆ ಮಂಜುನಾಥ್
