ಕೊರಟಗೆರೆ: ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವವಿದ್ದು, ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಮಧುಗಿರಿ ವಿಭಾಗದ ಡಿಡಿಪಿಐ ರಾಧಾ ಹೇಳಿದರು.
ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಪದವಿಪೂರ್ವ ಕಾಲೇಜುಗಳ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಜತೆಗೆ ಕ್ರೀಡೆಯನ್ನೂ ಸಮತೋಲನದಿಂದ ನೋಡಬೇಕು. ಕ್ರೀಡೆಯಲ್ಲಿ ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡಾಗ ವಿದ್ಯಾರ್ಥಿಗಳಲ್ಲಿ ಒಗ್ಗಟ್ಟು ಹಾಗೂ ‘ನಾವೆಲ್ಲರೂ ಒಂದೇ’ ಎಂಬ ಭಾವನೆ ಮೂಡುತ್ತದೆ ಎಂದರು.

ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಬೈಚಾಪುರ ಮುರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಹನುಮಯ್ಯ ಬಿ.ಆರ್. ಹಾಗೂ ಬಿ.ಡಿ.ಪುರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಅವರ ನೇತೃತ್ವದಲ್ಲಿ ಉತ್ತಮ ವ್ಯವಸ್ಥೆ ಮಾಡಲಾಗಿದೆ ಎಂದು ಶ್ಲಾಘಿಸಿದರು.
ಕ್ರೀಡೆಯಲ್ಲಿ ರಾಷ್ಟ್ರಮಟ್ಟದ ಸಾಧನೆ ಅಗತ್ಯ
ಬೈಚಾಪುರ ಮುರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಹನುಮಯ್ಯ ಬಿ.ಆರ್. ಮಾತನಾಡಿ, ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮಧುಗಿರಿ ವಿಭಾಗ ವಿಶಿಷ್ಟ ಸಾಧನೆ ಮಾಡಬೇಕು. ಇಲ್ಲಿನ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸುವ ಮೂಲಕ ಮಣ್ಣಿನ ಗುಣವನ್ನು ದೇಶಕ್ಕೆ ಸಾರಬೇಕು ಎಂದು ಹೇಳಿದರು.
ಬಿ.ಡಿ.ಪುರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆಯನ್ನು ಅಳವಡಿಸಿಕೊಂಡಾಗ ಮಾತ್ರ ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಿಸಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಕೊರಟಗೆರೆ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ನೇರಂ ನಾಗರಾಜು, ಉಪನ್ಯಾಸಕರಾದ ವೀರಣ್ಣ ತಾಲೂಕು ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ವಜೀರ್, ರಂಗನಾಥ್, ಗುಂಡೂರಾವ್ ಸೇರಿದಂತೆ ತಾಲ್ಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
