ರಾಮನಾಥಪುರ, ಆ.31: ಹಾಸನ ಜಿಲ್ಲೆಯಲ್ಲಿ ಕಳೆದ 20 ವರ್ಷಗಳಿಂದ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ ಜಯಂತಿಯನ್ನು ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಅರಕಲಗೂಡು ದೊಡ್ಡಮಠದ ಶ್ರೀ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಮನಾಥಪುರದ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ವತಿಯಿಂದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವ ಹಾಗೂ ಪ್ರಸ್ತುತ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದೊಡ್ಡಮಠದ ಶ್ರೀ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

12ನೇ ಶತಮಾನದ ಬಸವಾದಿ ಶಿವಶರಣರ ವಚನವಾದ “ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ; ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ” ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡರೆ ಜನ್ಮ ಸಾರ್ಥಕವಾಗುತ್ತದೆ ಎಂದು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ವಿದ್ಯಾರ್ಥಿಗಳಿಂದ ವಚನ ಪಠಣ ಮಾಡಿಸಿದರು.
ಕಾರ್ಯಕ್ರಮದ ಅಂಗವಾಗಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಭಕ್ತ ಬಳಗದ ಹಾಸನ ಜಿಲ್ಲಾ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಕಳೆದ 20 ವರ್ಷಗಳಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ವಿತರಿಸುತ್ತಾ ವಚನ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಭಕ್ತ ಬಳಗದ ಸಾಹಿತಿ ಸೀಬಹಳ್ಳಿ ಸೋಮಶೇಖರ್ ಮಾತನಾಡಿ, ನಾಡಿನ ಯುವಜನತೆ ಸೇರಿದಂತೆ ಪ್ರತಿಯೊಬ್ಬರೂ ವಚನ ಸಾಹಿತ್ಯವನ್ನು ಅಧ್ಯಯನ ಮಾಡುವ ಮೂಲಕ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಬದುಕಿಗೆ ತಮ್ಮ ಜೀವನವನ್ನೇ ಧಾರೆಯೆರೆದ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ ಆದರ್ಶ ಬದುಕು ಇಂದಿನ ಯುವಜನತೆಗೆ ಮಾದರಿಯಾಗಬೇಕು ಎಂದರು.
ಭಕ್ತ ಬಳಗದ ಜಿಲ್ಲಾ ಸಂಚಾಲಕ ಸುತ್ತೂರು ಪಂಚಾಕ್ಷರಿ ಮಾತನಾಡಿ, ಬಸವಾದಿ ಶರಣರ ವಿಚಾರಧಾರೆಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ಅಳಿವಿನಂಚಿನಲ್ಲಿದ್ದ ವಚನ ಸಾಹಿತ್ಯವನ್ನು ಉಳಿಸಿ, ಬೆಳೆಸಿ ಜನಮಾನಸದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸುತ್ತೂರು ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರು ಶರಣ ಸಾಹಿತ್ಯ ಪರಿಷತ್ತನ್ನು ರಚಿಸಿ ನಾಡಿನಾದ್ಯಂತ ಮೌಲಿಕ ಕಾರ್ಯಕ್ರಮಗಳನ್ನು ರೂಪಿಸಿದರು ಎಂದು ಹೇಳಿದರು.
“ಇವನಾರವ, ಇವ ನಮ್ಮವ” ಎಂದು ಎಲ್ಲರನ್ನೂ ಅಪ್ಪಿಕೊಂಡ ಬಸವಾದಿ ಶರಣರ ಆಧ್ಯಾತ್ಮಿಕ ಚಿಂತನೆ ಹಾಗೂ ಮಾನವೀಯ ಸಂದೇಶವನ್ನು ಸಾರುವ ಮಹತ್ವದ ಸಾಹಿತ್ಯವೇ ವಚನ ಸಾಹಿತ್ಯ ಎಂದು ಅವರು ವಿಶ್ಲೇಷಿಸಿದರು.
ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಶ್ರೀ ಶಿವರಾತ್ರಿ ರಾಜೇಂದ್ರ ಭಕ್ತ ಬಳಗದ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ತಾಲ್ಲೂಕು ಅಧ್ಯಕ್ಷ ವಿರೂಪಾಕ್ಷ, ಸದಸ್ಯರಾದ ಮೋಕ್ಷ, ಯುವ ಘಟಕದ ಅಧ್ಯಕ್ಷ ಆರ್.ಕೆ. ಶ್ರೀನಿವಾಸ್, ಮಹಿಳಾ ವೇದಿಕೆ ಅಧ್ಯಕ್ಷೆ ರಾಧಿಕಾ, ಮುಖ್ಯಶಿಕ್ಷಕ ರಾಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
