ಕೆ.ಆರ್.ಪೇಟೆ: ಸದೃಢ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ದುಶ್ಚಟಗಳಿಗೆ ದಾಸರಾಗದೆ ಜಾಗೃತಗೊಳ್ಳಬೇಕಾದ ಅನಿವಾರ್ಯದ ಅಗತ್ಯವಿದೆ ಎಂದು ಚನ್ನರಾಯಪಟ್ಟಣ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರು ಹಾಗೂ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಕರೆ ನೀಡಿದರು.
ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಆರ್.ಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಜನಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಸ್ತುತ ಹದಿಹರೆಯದ ಪ್ರೌಢ ಶಾಲಾ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆದ್ದರಿಂದ ಸದೃಢ ಸಮಾಜಕ್ಕಾಗಿ ಇಂತಹ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಇಂತಹ ಹಲವಾರು ಜನಜಾಗೃತಿ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳನ್ನು ಹಾಗೂ ಸಮಾಜವನ್ನು ತಿದ್ದುವ ಮಹತ್ಕಾರ್ಯ ಮಾಡುತ್ತಿದ್ದಾರೆ.ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಅರಿವು ಮೂಡಿಸುವುದು ಅತಿಮುಖ್ಯ. ಈ ನಿಟ್ಟಿನಲ್ಲಿ ತಂದೆ-ತಾಯಿ ಹಾಗೂ ಗುರುಗಳು ಹೇಳಿದ ಮಾತುಗಳನ್ನು ವಿದ್ಯಾರ್ಥಿಗಳು ಆಲಿಸಿ, ಉತ್ತಮ ಸಂಸ್ಕಾರ ಬೆಳೆಸಿಕೊಂಡು ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಉಪನ್ಯಾಸಕ ಹರಿಚರಣ್ ತಿಲಕ್ ಅವರು ಮಾತನಾಡಿ, ದೇಶವನ್ನು ನಾಶ ಮಾಡಲು ಯಾವ ಮದ್ದು ಗುಂಡು ಬೇಕಾಗಿಲ್ಲ, ದುಶ್ಚಟಗಳೇ ಸಾಕು. ದುಶ್ಚಟಕ್ಕೆ ಬಿದ್ದರೆ ಮೂರು ಗ್ಯಾರಂಟಿ ಖಚಿತ ಅಕಾಲಿಕ ಮರಣ, ಆಸ್ತಿ ನಾಶ ಮತ್ತು ಆರೋಗ್ಯ ಹಾನಿ ಗ್ಯಾರಂಟಿ ಎಂದು ಮಾರ್ಮಿಕವಾಗಿ ವಿವರಿಸಿದರು.ಯಾವ ಸರ್ಕಾರಗಳು ದುಶ್ಚಟಗಳನ್ನು ಮಟ್ಟ ಹಾಕಬೇಕಿತ್ತೋ, ಅದೇ ಸರ್ಕಾರಗಳು ಪರೋಕ್ಷವಾಗಿ ದುಶ್ಚಟಗಳಿಗೆ ನೆರವು ನೀಡುತ್ತಿವೆ. ಇದಕ್ಕೆ ಸಾಕ್ಷಿ ಎಂದರೆ ಪ್ರತಿ ಹಳ್ಳಿ-ಹಳ್ಳಿಯಲ್ಲೂ ಮದ್ಯದ ಅಂಗಡಿಗಳು ತೆರೆದುಕೊಳ್ಳುತ್ತಿವೆ. ಇದನ್ನು ತಡೆಗಟ್ಟಲು ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಇಂತಹ ಉಪಯುಕ್ತ ಅರಿವು ಕಾರ್ಯಕ್ರಮಗಳ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಗಿರೀಶ್ ವಹಿಸಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ವಿರುದ್ಧ ಪ್ರತಿಜ್ಞಾ ಬೋಧನೆ ಮಾಡಲಾಯಿತು. ನಾವು ಯಾವುದೇ ಕಾರಣಕ್ಕೂ ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳಂತಹ ದುಶ್ಚಟಗಳಿಗೆ ಬಲಿಯಾಗುವುದಿಲ್ಲ, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುತ್ತೇವೆ ಎಂದು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಗಿರೀಶ್, ಶ್ರೀ ಧರ್ಮಸ್ಥಳ ಸಂಸ್ಥೆ ಮೇಲ್ವಿಚಾರಕಿ ಲಕ್ಷ್ಮಿ,ಶಿಕ್ಷಕ ಅಣ್ಣಪ್ಪ,ಶಿವಮೂರ್ತಿ, ಪ್ರೀತಿ ಜಿ. ಎಂ, ಶಿವಮೂರ್ತಿ,ಸೇವಾ ಪ್ರತಿನಿಧಿ ಅರಿಣಿ, ಮಕ್ಕಳ ಪೋಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
