ರಾಮನಾಥಪುರ: ಹೋಬಳಿಯ ಲಕ್ಕೂರು ಸರ್ಕಾರಿ ಶಾಲೆಯ ಆವರಣದಲ್ಲಿರುವ ಮಕ್ಕಳ ಮನೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕ್ಷೇತ್ರದ ಶಾಸಕ ಎ. ಮಂಜು ಅವರ ಮಾರ್ಗದರ್ಶನದಲ್ಲಿ, ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ಸಹಕಾರದಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣದ ಜೊತೆಗೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸೃಜನಶೀಲ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಜನ್ಮಾಷ್ಟಮಿ ಅಂಗವಾಗಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ, ರಾಧಾ–ಕೃಷ್ಣರ ಭಕ್ತಿಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು. ಮಕ್ಕಳ ಮನಮೋಹಕ ವೇಷಭೂಷಣ ಹಾಗೂ ನೃತ್ಯ ಪ್ರದರ್ಶನವು ಗ್ರಾಮಸ್ಥರು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಯಿತು.

ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರು, ಮುಖ್ಯಶಿಕ್ಷಕರು ಹಾಗೂ ಮಕ್ಕಳ ಮನೆಯ ಶಿಕ್ಷಕಿಯರು ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶ್ರೀಕೃಷ್ಣನ ಕಥೆಗಳು, ಶ್ಲೋಕಗಳು ಹಾಗೂ ಭಕ್ತಿಗೀತೆಗಳ ಮೂಲಕ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಪರಿಚಯ ಮಾಡಿಸಲಾಯಿತು.
ಗ್ರಾಮೀಣ ಭಾಗದ ಮಕ್ಕಳಿಗೂ ಉತ್ತಮ ಕಲಿಕಾ ಅನುಭವ ಹಾಗೂ ಸಮಾನ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಮಕ್ಕಳ ಮನೆಯಲ್ಲಿ ಇಂತಹ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ.
