ಕೆ.ಆರ್.ಪೇಟೆ, ಸೆ.03: ಮಂಡ್ಯ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಸಮರ್ಪಕ ಬರ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಕೆ.ಆರ್.ಪೇಟೆ ತಾಲ್ಲೂಕು ಘಟಕದ ಕಾರ್ಯಕರ್ತರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ, ಜಿಲ್ಲಾ ಸಹ ಕಾರ್ಯದರ್ಶಿ ಬಿ. ಹನುಮೇಶ್, ತಾಲ್ಲೂಕು ಕಾರ್ಯದರ್ಶಿ ಜಿ.ಹೆಚ್. ಗಿರೀಶ್, ಜಿಲ್ಲಾ ಸಮಿತಿ ಸದಸ್ಯರಾದ ಎನ್. ಸುರೇಂದ್ರ, ರಂಜಿತಾ, ಲಕ್ಷ್ಮಿ, ಗೋಪಾಲ್, ಜಯಮ್ಮ, ಆಶಾ, ಮಂಜುಳಾ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಮಂಡ್ಯ ಜಿಲ್ಲೆಗೆ ಬರ ನಿರ್ವಹಣೆಗಾಗಿ ಕನಿಷ್ಠ ₹2 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಕೂಲಿಕಾರರಿಗೆ ಕೂಲಿ ನಷ್ಟದ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 200 ದಿನಗಳ ಕೆಲಸ ನೀಡುವುದರ ಜೊತೆಗೆ ದಿನಗೂಲಿಯನ್ನು ₹700ಕ್ಕೆ ಹೆಚ್ಚಿಸಬೇಕು. ಮಂಡ್ಯ ಜಿಲ್ಲೆಯ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಕೂಲಿಕಾರರ ಮೈಕ್ರೋಫೈನಾನ್ಸ್ ಸಾಲವನ್ನೂ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಕಾವೇರಿ ನೀರಿನ ಕೊರತೆ ಎದುರಾದ ಸಂದರ್ಭದಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ₹5 ಸಾವಿರ ಕೋಟಿ ಶಾಶ್ವತ ಪರಿಹಾರ ನಿಧಿ ಸ್ಥಾಪಿಸಬೇಕು. ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಸಂಕಷ್ಟ ಪರಿಹಾರ ಸೂತ್ರ ರೂಪಿಸಿ ವಿವಾದಕ್ಕೆ ಅಂತ್ಯ ಹಾಡಬೇಕು ಎಂದು ಒತ್ತಾಯಿಸಿದರು.
ಕೆ.ಆರ್.ಪೇಟೆ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಎಲ್ಲ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಹಲವು ದಿನಗಳಿಂದ ಸ್ಥಗಿತಗೊಂಡಿರುವ ಅಂಗವಿಕಲರ ವೇತನ, ವಿಧವಾ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳ ಮಾಸಿಕ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕಳೆದ ಮೂರು ವರ್ಷಗಳಿಂದ ಹೊಸ ಪಡಿತರ ಚೀಟಿಗಳನ್ನು ನೀಡಿಲ್ಲ. ಆದ್ದರಿಂದ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯ ನೆಪದಲ್ಲಿ ಕೆಲ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಣೆ ಆಗುತ್ತಿಲ್ಲ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಳೆಯ ಕೊರತೆಯಿಂದ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿವೆ. ನೀರಾವರಿ ಸಲಹಾ ಸಮಿತಿ ಬೆಳೆಗಳಿಗೆ ಕೇವಲ ನಾಲ್ಕು ಕಟ್ಟು ನೀರು ನೀಡುವುದಾಗಿ ಘೋಷಿಸಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಮಳೆಯಾಶ್ರಿತ ಪ್ರದೇಶಗಳಲ್ಲಿ ಬಿತ್ತನೆ ಸಾಧ್ಯವಾಗದೆ ಗ್ರಾಮೀಣ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿಯೂ ಮಳೆ ಕೊರತೆಯಿಂದ ಕೆಆರ್ಎಸ್ಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಂದಿಲ್ಲ. ಇಂತಹ ಸಂದರ್ಭದಲ್ಲಿ ಹೇಮಾವತಿ, ಹಾರಂಗಿ ಸೇರಿದಂತೆ ಜಲಾಶಯಗಳ ನೀರನ್ನು ಬಳಸಿಕೊಂಡು ತಮಿಳುನಾಡಿಗೆ ನೀರು ಹರಿಸುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾವೇರಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ(ಎಂ)ನ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆಯ ಬಳಿಕ ತಹಸೀಲ್ದಾರ್ ಲೋಕೇಶ್ ಅವರಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.
-ಶ್ರೀನಿವಾಸ್ ಆರ್.
