ರಾಮನಾಥಪುರ: ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗ್ರಾಮೀಣ ಮಕ್ಕಳಿಗೆ ಆರಂಭದಿಂದಲೇ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳನ್ನು ತೆರೆದಿದ್ದು, ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಹೇಳಿದರು.

ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಪಟ್ಟಾಭಿರಾಮ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ನಡೆದ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಆದರೆ ಕ್ರೀಡೆಯ ಜೊತೆಗೆ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎ. ಮಂಜು ಸಲಹೆ ನೀಡಿದರು.

ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ಮಾತನಾಡಿ, ದೇಶದ ಅಭಿವೃದ್ಧಿ ಹಾಗೂ ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಮಕ್ಕಳು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪೋಷಕರು ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶಿವರಾಮ್, ಕ್ರೀಡಾಕೂಟದ ಮುಖ್ಯಸ್ಥರು ಹಾಗೂ ಟಿ.ಪಿ.ಇ.ಒ. ಬಸವರಾಜ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವಕುಮಾರ್, ನಜೀಬ್, ರಘು, ಪಾಂಡುರಂಗನ್, ಕೃಷ್ಣೇಗೌಡ, ಗಣೇಶ್, ಪುರುಷೋತ್ತಮ, ಕುಳ್ಳಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ಕುಮಾರಸ್ವಾಮಿ, ರಾಮನಾಥಪುರ
