ರಾಮನಾಥಪುರ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಂಡು, ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕು ಎಂದು ಕೆಸವತ್ತೂರು ಶ್ರೀ ಸಿದ್ದಲಿಂಗೇಶ್ವರ ಮಠದ ಶ್ರೀ ಬಸವರಾಜೇಂದ್ರಸ್ವಾಮೀಜಿ ಹೇಳಿದರು.
ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಪಟ್ಟಾಭಿರಾಮ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಗುರುವಾರ ನಡೆದ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದ ಯಶಸ್ಸಿನ ಹಿಂದೆ ಗುರುಗಳ ಶ್ರಮ ಹಾಗೂ ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸುತ್ತದೆ. ಗುರುಗಳು ನೀಡುವ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾವು ವಿದ್ಯಾಭ್ಯಾಸ ಮಾಡಿದ ಶಾಲೆ ಕೇವಲ ನೆನಪಾಗಿ ಉಳಿಯದೆ, ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವ ಉತ್ತಮ ಶಿಕ್ಷಣ ಕೇಂದ್ರವಾಗಿ ಬೆಳೆಯಬೇಕು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶ್ರೀಗಳು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪಟ್ಟಾಭಿರಾಮ ಗ್ರಾಮಾಂತರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವರಾಮ್, ಟಿಪಿಇಒ ಬಸವರಾಜ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವಕುಮಾರ್, ನಜೀಬ್, ರಘು, ಪಾಂಡುರಂಜನ್, ಕೃಷ್ಣೇಗೌಡ, ಗಣೇಶ್, ಪುರುಷೋತ್ತಮ, ಕುಳ್ಳಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
