ಚನ್ನರಾಯಪಟ್ಟಣ: ಮಹಾತ್ಮ ಗಾಂಧೀಜಿಯವರ ಕನಸಿನ ರಾಮರಾಜ್ಯ ಹಾಗೂ ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದು ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಆರ್. ಪಾಟೀಲ್ ಹೇಳಿದರು.
ತಾಲ್ಲೂಕಿನ ಹಿರಿಸಾವೆ ಹೋಬಳಿಯ ದಿಡಗ ಗ್ರಾಮದ ಸುವರ್ಣ ಭವನದಲ್ಲಿ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಗಾಂಧಿ ತತ್ವ ಪ್ರಣೀತ ಯುವಜನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಸಮಾಜ ಮೊದಲಿನಂತಿಲ್ಲ. ಸಾಮಾಜಿಕ ಸ್ವಾಸ್ಥ್ಯ ಹದಗೆಟ್ಟಿದ್ದು, ಉತ್ತಮ ಸಂಸ್ಕೃತಿ ನಿರ್ಮಾಣದ ಅಗತ್ಯವಿದೆ. ಪ್ರತಿಯೊಬ್ಬರ ಬದುಕು ಮತ್ತು ನಡೆ ಸಮಾಜದ ಮೇಲೆ ಪರಿಣಾಮ ಬೀರುವಂತಿರಬೇಕು. ಪ್ರತಿಭಾನ್ವಿತರಿಗೆ ಪ್ರೋತ್ಸಾಹ ಹಾಗೂ ಸಹಕಾರ ನೀಡುವುದರ ಜೊತೆಗೆ ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಮಹಾತ್ಮ ಗಾಂಧೀಜಿಯವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆದರ್ಶ, ತತ್ವ ಹಾಗೂ ಸಂದೇಶಗಳು ಇಂದಿಗೂ ಜೀವಂತವಾಗಿವೆ. ಅವರ ಹೋರಾಟದ ಫಲವಾಗಿ ನಾವು ಸ್ವತಂತ್ರವಾಗಿ ಬದುಕು ಕಟ್ಟಿಕೊಂಡಿದ್ದೇವೆ. ಭೂಮಿ ಹಾಗೂ ಪ್ರಪಂಚ ಇರುವವರೆಗೂ ಗಾಂಧೀಜಿಯವರ ಹೆಸರು ಶಾಶ್ವತವಾಗಿ ಉಳಿಯಲಿದೆ. ಅವರ ಚಿಂತನೆಗಳು ಹಾಗೂ ಸ್ವಾತಂತ್ರ್ಯ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
ಯಾವುದೇ ವ್ಯಕ್ತಿ ಯಶಸ್ಸಿನ ಮೆಟ್ಟಿಲು ಹತ್ತುವಾಗ ಹಿಂದಿರುಗಿ ನೋಡಬಾರದು. ಆದರೆ ಯಶಸ್ಸು ಸಾಧಿಸಿದ ಬಳಿಕ ತಾನು ನಡೆದು ಬಂದ ದಾರಿಯನ್ನು ಮರೆಯಬಾರದು. ಉತ್ತಮ ಸ್ನೇಹಿತರು ಸಿಗದಿದ್ದರೆ ಪುಸ್ತಕಗಳನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು. ಪುಸ್ತಕಗಳಲ್ಲಿನ ವಿಚಾರಧಾರೆಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಮಹಾತ್ಮ ಗಾಂಧೀಜಿಯವರ ದೇಹವನ್ನು ಕೊಲ್ಲಲು ಸಾಧ್ಯವಾಗಿರಬಹುದು. ಆದರೆ ಅವರ ಆದರ್ಶ, ತತ್ವ, ಸಂದೇಶ ಹಾಗೂ ವಿಚಾರಧಾರೆಗಳನ್ನು ಯಾರಿಂದಲೂ ಎಂದಿಗೂ ಕೊಲ್ಲಲು ಸಾಧ್ಯವಿಲ್ಲ ಎಂದರು.
ಪ್ರಪಂಚದಲ್ಲಿ ಮಾನವೀಯ ಮೌಲ್ಯಗಳು ಇರುವವರೆಗೂ ಹಾಗೂ ಗಾಂಧಿವಾದಿಗಳು ಬದುಕಿರುವವರೆಗೂ ಮಹಾತ್ಮ ಗಾಂಧೀಜಿಯವರ ಹೆಸರು ಮತ್ತು ವಿಚಾರಧಾರೆಗಳು ಶಾಶ್ವತವಾಗಿ ಉಳಿಯಲಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಕೆಲವರು ಇದ್ದಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.
ಗಾಂಧಿ ಭವನದ ಸಲಹೆಗಾರ ಪ್ರೊ. ಜಿ.ಬಿ. ಶಿವರಾಜು ಅವರು ಗಣ್ಯರು ಹಾಗೂ ಶಿಬಿರಾರ್ಥಿಗಳನ್ನು ಸ್ವಾಗತಿಸಿ ಅಭಿನಂದಿಸಿದರು. ಶಿಬಿರಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ರಾಜ್ಯದ ಆರು ಜಿಲ್ಲೆಗಳಿಂದ ಸುಮಾರು 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಕೆ. ಚಂದ್ರು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟರಾಜು ಹಾಗೂ ಎಂ.ಆರ್. ವಾಸು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಸತೀಶ್, ಇಸಿಒ ಅನಿಲ್ ಕುಮಾರ್, ದಿಡಗ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಆರ್. ಮಂಜುನಾಥ್, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನೀಲಿಸಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್. ಪ್ರಕಾಶ್, ಮಾಜಿ ಸದಸ್ಯರಾದ ಜ್ಯೋತಿಶ್, ಸೌಮ್ಯ ಗವಿಶ್, ಪ್ರಮುಖರಾದ ಯೋಗೇಶ್, ದಿನೇಶ್, ಉಮೇಶ್ ಬಳಗಾರ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
