ಚನ್ನರಾಯಪಟ್ಟಣ: ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರೆಸ್ಟೀಜ್ ಗ್ಲೋಬಲ್ ಅಕಾಡೆಮಿ ಶೈಕ್ಷಣಿಕ ಸಹಭಾಗಿತ್ವದ ಟ್ರಸ್ಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಎಂ.ಎಸ್. ಸೋನು ಉದ್ದ ಜಿಗಿತ, ಟ್ರಿಪಲ್ ಜಂಪ್ ಹಾಗೂ 100 ಮೀಟರ್ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಮೂರು ವಿಭಾಗಗಳಲ್ಲಿ ಪ್ರಶಸ್ತಿ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಪರಿಣಿತ್ 100 ಮೀಟರ್ ಹಾಗೂ 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಬಾಲಕರ ಗುಂಪು ಆಟಗಳ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿದೆ. ಬಾಲಕಿಯರ ಗುಂಪು ಆಟಗಳ ವಿಭಾಗದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವೇಳೆ ಬಾಲಕರ 4×100 ಮೀಟರ್ ರಿಲೇ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕ್ರೀಡಾಕೂಟದಲ್ಲಿ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿ, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ವರದಿ : ಐ ಕೆ ಮಂಜುನಾಥ್
