ಚನ್ನರಾಯಪಟ್ಟಣ: ತಾಲೂಕು ಕ್ರೀಡಾಂಗಣದಲ್ಲಿ ಹಾಸನ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚನ್ನರಾಯಪಟ್ಟಣದ ಪ್ರತಿಭಾವಂತ ಕ್ರೀಡಾಪಟು ಸಿ.ಎ. ಸೃಜನ್ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ತ್ರಿವಳಿ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
10 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 5 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 4×100 ಮೀಟರ್ ರಿಲೇ ಓಟದಲ್ಲಿಯೂ ಪ್ರಥಮ ಸ್ಥಾನ ಪಡೆಯುವ ಮೂಲಕ ಸೃಜನ್ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸೃಜನ್ ಅವರ ಕ್ರೀಡಾ ಸಾಧನೆಗೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಾಗೂ ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವ ಮೂಲಕ ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
– ಮಂಜುನಾಥ್ ಐ.ಕೆ.
