ಹಾಸನ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸೇವಾ, ಸಾಮಾಜಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸಿದ್ದೇಶ್ ನಾಗೇಂದ್ರ ತಿಳಿಸಿದರು.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಂಜೆ 6ರಿಂದ 7ರವರೆಗೆ ‘ಆಶೀರ್ವಾದ ದೀಪ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಹಾಸನ ಜಿಲ್ಲಾ ಘಟಕ ಹಾಗೂ ವಿವಿಧ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಸಿದ್ಧೇಶ್ವರ ಜ್ಯೋತಿರ್ಮಹಾಸ್ವಾಮಿಗಳ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿಗೆ ಆಯುಷ್ಯ, ಆರೋಗ್ಯ ಹಾಗೂ ದೇಶವನ್ನು ಮುನ್ನಡೆಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ
‘ವಿಕಸಿತ ಭಾರತ–2047’ರ ಸಂಕಲ್ಪವನ್ನು ಯುವಜನತೆ ಹಾಗೂ ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕಿರಿಯ ಮಕ್ಕಳಿಗೆ ಚಿತ್ರಕಲೆ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ಹಾಗೂ ಪುಸ್ತಕಗಳನ್ನು ವಿತರಿಸಲಾಗುವುದು.
ಮಕ್ಕಳಲ್ಲಿ ದೇಶಭಕ್ತಿ, ಸಂಸ್ಕಾರ, ಸಂಸ್ಕೃತಿ ಹಾಗೂ ರಾಷ್ಟ್ರ ನಿರ್ಮಾಣದ ಕುರಿತು ಅರಿವು ಮೂಡಿಸುವ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಗಾಂಧಿ ಜಯಂತಿಯಿಂದ ‘ಬದಲಾವಣೆಯ ಉತ್ಸವ’
ಅ.2ರ ಗಾಂಧಿ ಜಯಂತಿಯಂದು ಜಿಲ್ಲೆಯಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬಳಿಕ ಅ.2ರಿಂದ ಅ.7ರವರೆಗೆ ‘ಬದಲಾವಣೆಯ ಉತ್ಸವ’ ಹೆಸರಿನಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುವುದು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದ ಜನರ ಜೀವನದಲ್ಲಿ ಉಂಟಾಗಿರುವ ಬದಲಾವಣೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಮನೆ-ಮನೆ ಸಂಪರ್ಕ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ
ಎಂಎಸ್ಎಂಇ, ಮಹಿಳಾ ಉದ್ಯಮಶೀಲತೆ, ವಿದ್ಯಾರ್ಥಿವೇತನ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆದವರ ಅನುಭವ ಹಾಗೂ ಜೀವನದಲ್ಲಿ ಆಗಿರುವ ಬದಲಾವಣೆಗಳನ್ನು ಜನರ ಮುಂದಿಡುವ ಮೂಲಕ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶಗಳಿಗೂ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಪರಿಸರ ಸಂರಕ್ಷಣೆ, ಸುಸ್ಥಿರ ಜೀವನಶೈಲಿ ಹಾಗೂ ಜೈವಿಕವಾಗಿ ವಿಘಟಿಸಬಹುದಾದ ವಸ್ತುಗಳ ಬಳಕೆಗೆ ಉತ್ತೇಜನ ನೀಡುವ ಚಟುವಟಿಕೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದರು.
ಯುವಕರಿಗೆ ಸ್ಟಾರ್ಟಪ್ ಮಾಹಿತಿ
ರಾಷ್ಟ್ರೀಯ ಆವಿಷ್ಕಾರ ಹಾಗೂ ಸ್ಟಾರ್ಟಪ್ ಕ್ಷೇತ್ರದ ಕುರಿತು ಯುವಜನರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಹೊಸ ಉದ್ಯಮಗಳ ಆರಂಭ, ಉತ್ತೇಜನ, ಮಾರ್ಗದರ್ಶನ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಯುವಕರಿಗೆ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕದ ಬೆಂಗಳೂರಿನಲ್ಲಿ ಸ್ಟಾರ್ಟಪ್ ಕ್ಷೇತ್ರದಲ್ಲಿ ಹೆಚ್ಚಿನ ಚಟುವಟಿಕೆಗಳು ನಡೆಯುತ್ತಿದ್ದು, ಯುವಕರು ಹೊಸ ಉದ್ಯಮಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೋತ್ಸಾಹಿಸಲಾಗುವುದು ಎಂದರು.
ಆರೋಗ್ಯಕ್ಕೂ ಆದ್ಯತೆ
ಅಭಿಯಾನದಡಿ ಆರೋಗ್ಯ ಕ್ಷೇತ್ರಕ್ಕೂ ಆದ್ಯತೆ ನೀಡಲಾಗಿದ್ದು, ವಿವಿಧೆಡೆ ರಕ್ತದಾನ ಶಿಬಿರ, ರಕ್ತ ಪರೀಕ್ಷೆ ಹಾಗೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೇವಾ ಚಟುವಟಿಕೆಗಳನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ವಿವಿಧ ಯೋಜನೆಗಳ ಮಾಹಿತಿ
ಗುಜರಾತ್ನಲ್ಲಿ ಆರಂಭಗೊಂಡು ನಂತರ ದೇಶದ ವಿವಿಧ ಭಾಗಗಳಲ್ಲಿ ವಿಸ್ತರಣೆಯಾದ ಕೆಲವು ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮುಖಂಡರು ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದರು. ಗ್ರಾಮೀಣ ವಿದ್ಯುದೀಕರಣ, ಆರೋಗ್ಯ ಸೇವೆ, ಡಿಜಿಟಲ್ ವ್ಯವಸ್ಥೆ ಹಾಗೂ ಜಲ ಸಂರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು.
‘ಜಲ ಜೀವನ್ ಮಿಷನ್’, ‘ಡಿಜಿಟಲ್ ಇಂಡಿಯಾ’, ‘ಖೇಲೋ ಇಂಡಿಯಾ’ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಡಿಜಿಟಲ್ ಸೇವೆಗಳು ಹಾಗೂ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು.
‘ಪ್ರಧಾನಮಂತ್ರಿ ಜನಧನ್ ಯೋಜನೆ’ ಮೂಲಕ ಬ್ಯಾಂಕ್ ಖಾತೆ ತೆರೆಯುವ ವ್ಯವಸ್ಥೆ ಜಾರಿಗೊಂಡಿದ್ದು, ವಿವಿಧ ಸರ್ಕಾರಿ ಸೌಲಭ್ಯಗಳ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸುವ ವ್ಯವಸ್ಥೆ ರೂಪುಗೊಂಡಿದೆ ಎಂದು ತಿಳಿಸಿದರು.
ಎಲ್ಲಾ ತಾಲೂಕುಗಳಿಗೂ ಅಭಿಯಾನ ವಿಸ್ತರಣೆ
‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯನ್ನೂ ಆಯೋಜಿಸುವ ಉದ್ದೇಶವಿದ್ದು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಹಾಗೂ ತಾಲೂಕುಗಳಲ್ಲಿ ಸೇವಾ ಚಟುವಟಿಕೆಗಳನ್ನು ವಿಸ್ತರಿಸಿ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದರು.
ಮಕ್ಕಳು, ಯುವಕರು, ಮಹಿಳೆಯರು, ರೈತರು, ಉದ್ಯಮಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳನ್ನು ಒಳಗೊಂಡಂತೆ ಸೇವಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಲಾಗುವುದು ಎಂದು ಮುಖಂಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಮಿತ್ ಶೆಟ್ಟಿ, ನೇತ್ರಾವತಿ ಮಂಜುನಾಥ್, ಅಶೋಕ್, ಮೋಹನ್, ಡಾ. ಚೇತನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
