ಕೊರಟಗೆರೆ:– ತಾಲ್ಲೂಕು ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದರು.
ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಯ ಭಾಗವಾಗಿ ಗುರುವಾರ ನೂತನ ತಾಲ್ಲೂಕು ಪಂಚಾಯಿತಿ ಕಟ್ಟಡ ನಿರ್ಮಾಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪ್ರಗತಿ, ನಿರ್ಮಾಣದ ಗುಣಮಟ್ಟ ಹಾಗೂ ಕೈಗೊಳ್ಳಲಾಗಿರುವ ವಿವಿಧ ಹಂತಗಳ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಕಾಮಗಾರಿಯ ಪ್ರಸ್ತುತ ಸ್ಥಿತಿಗತಿ ಹಾಗೂ ಪೂರ್ಣಗೊಳಿಸುವ ಅವಧಿಯ ಕುರಿತು ಮಾಹಿತಿ ಪಡೆದರು.
ನಿಗದಿತ ಅವಧಿಯಲ್ಲಿ ಪೂರ್ಣ:
ಕಟ್ಟಡ ನಿರ್ಮಾಣದಲ್ಲಿ ಯಾವುದೇ ರೀತಿಯ ಗುಣಮಟ್ಟದ ರಾಜಿ ಮಾಡಿಕೊಳ್ಳಬಾರದು. ನಿರ್ಮಾಣ ಕಾಮಗಾರಿಗೆ ಬಳಸುವ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕ ಬಳಕೆಗೆ ಕಟ್ಟಡವನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ವಿವಿಧ ಇಲಾಖೆಗಳ ಆಡಳಿತ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಸುಗಮವಾಗಿ ಪಡೆಯಲು ಅನುಕೂಲವಾಗುವಂತೆ ನೂತನ ಕಟ್ಟಡವನ್ನು ರೂಪಿಸಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಸುಗಮ ಆಡಳಿತ ಸೇವೆ ಆಶಯ:
ನೂತನ ತಾಲ್ಲೂಕು ಪಂಚಾಯಿತಿ ಕಟ್ಟಡವು ಕೇವಲ ಆಡಳಿತ ಕಚೇರಿಯಾಗಿರದೆ, ಗ್ರಾಮೀಣ ಜನರಿಗೆ ಇನ್ನಷ್ಟು ಸುಗಮ ಹಾಗೂ ಪರಿಣಾಮಕಾರಿ ಆಡಳಿತ ಸೇವೆ ಒದಗಿಸುವ ಕೇಂದ್ರವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.
ಕಾಮಗಾರಿಯ ಪ್ರತಿಯೊಂದು ಹಂತವನ್ನು ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ, ನಿಗದಿತ ಮಾನದಂಡದಂತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಕಟ್ಟಡದ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ಬಳಕೆಯಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ತಹಸೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯಿತಿ ಇಓ ಅಪೂರ್ವ ಆನಂದ್ ರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್ ಅರಕೆರೆ ಶಂಕರ್, ಮುಖಂಡರುಗಳಾದ ಮಹಲಿಂಗಪ್ಪ, ರಾಜಣ್ಣ , ಓಬಳರಾಜು, ಭೈರಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
