ಬೆಂಗಳೂರು/ಮಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಡಿಸೆಂಬರ್ ಒಳಗೆ ಚುನಾವಣೆ ನಡೆಸಲು ಸಚಿವ ಸಂಪುಟ ತೀರ್ಮಾನಿಸಿದೆ.
ಚುನಾವಣೆ ವೇಳೆ EVM ಬದಲಿಗೆ ಸಾಂಪ್ರದಾಯಿಕ ಮತಪೆಟ್ಟಿಗೆಗಳನ್ನು ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಚುನಾವಣೆಗಾಗಿ ಅಗತ್ಯವಿರುವ ಮತಪೆಟ್ಟಿಗೆಗಳ ಖರೀದಿ ಹಾಗೂ ಮತದಾನ ಪ್ರಕ್ರಿಯೆಯ ಲೈವ್ ವೆಬ್ಕಾಸ್ಟಿಂಗ್ ಸೇರಿದಂತೆ ಒಟ್ಟು ₹151.31 ಕೋಟಿ ವೆಚ್ಚಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಮೊರೆ ಹೋಗಿರುವ ಬೆನ್ನಲ್ಲೇ ಸಚಿವ ಸಂಪುಟದ ಈ ನಿರ್ಧಾರ ಹೊರಬಿದ್ದಿದೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿಯೂ ಸಿದ್ಧತೆಗಳು ಆರಂಭವಾಗಿದ್ದು, ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರದ ಕುರಿತು ಚರ್ಚೆಗಳು ನಡೆಯುತ್ತಿವೆ.
