ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಣ್ಣೇನಹಳ್ಳಿಯಿಂದ ಹೊಸಕೋಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಕ್ಕಪಕ್ಕದ ಜಮೀನಿನವರು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು, ರಸ್ತೆ ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವಂತೆ ಗ್ರಾಮಸ್ಥರು ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಕೆ. ಅವರಿಗೆ ಮನವಿ ಸಲ್ಲಿಸಿದರು.
ಹೊಸಕೋಟೆ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬೋರ್ವೆಲ್ ಕೊರೆಯಲು ಗ್ರಾಮಸ್ಥರು ಮುಂದಾಗಿದ್ದರು. ಆದರೆ ಅಕ್ಕಪಕ್ಕದ ಜಮೀನಿನವರು ಆಕ್ಷೇಪ ವ್ಯಕ್ತಪಡಿಸಿ ಬೋರ್ವೆಲ್ ಕೊರೆಯಲು ಅವಕಾಶ ನೀಡುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.

ಗ್ರಾಮಸ್ಥರ ಮನವಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮಂಜುನಾಥ್ ಕೆ. ಅವರು ರಸ್ತೆ ಪರಿಶೀಲನೆ ನಡೆಸಿದರು. ಸರ್ಕಾರದ ವತಿಯಿಂದ ಪಿಡಬ್ಲ್ಯೂಡಿ ಹಾಗೂ ಪಿಆರ್ಇಡಿ ಇಲಾಖೆಗಳ ಅಡಿಯಲ್ಲಿ ರಸ್ತೆ ನಿರ್ಮಾಣವಾಗಿದ್ದು, ನಿಯಮದಂತೆ ರಸ್ತೆ 12 ಮೀಟರ್ ಅಗಲ ಇರಬೇಕಾಗಿದೆ. ಆದರೆ ಅಕ್ಕಪಕ್ಕದ ಜಮೀನಿನವರು ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ ಎಂದು ತಿಳಿಸಿದರು.
ಈ ಕುರಿತು ಸಂಬಂಧಪಟ್ಟ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ರಸ್ತೆ ಒತ್ತುವರಿಯನ್ನು ಶೀಘ್ರ ತೆರವುಗೊಳಿಸಿ ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಲಾಗುವುದು ಎಂದು ತಹಶೀಲ್ದಾರ್ ಭರವಸೆ ನೀಡಿದರು.

ಈ ಕುರಿತು ಮಾತನಾಡಿದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಮಳೆ ಕೊರತೆಯಿಂದ ರೈತರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ರಸ್ತೆ ಬದಿಯಲ್ಲಿ ಬೋರ್ವೆಲ್ ಕೊರೆದು ನೀರು ಬಳಸಲಾಗುತ್ತಿದೆ. ಆದರೆ ಹೊಸಕೋಟೆ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಬೋರ್ವೆಲ್ ಕೊರೆಯಲು ಪ್ರಯತ್ನಿಸುತ್ತಿದ್ದರೂ ರಸ್ತೆ ಬದಿಯ ಜಮೀನಿನವರು ಅಡ್ಡಿಪಡಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಕಾಡುಗೊಲ್ಲ ಅಧ್ಯಕ್ಷ ಮುತ್ತುರಾಜು ಮಾತನಾಡಿ, ತಣ್ಣೇನಹಳ್ಳಿಯಿಂದ ಹೊಸಕೋಟೆ ಗ್ರಾಮದವರೆಗೆ ಕೆಲವರು ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಭಾಗದಲ್ಲಿ ರಸ್ತೆ ಒತ್ತುವರಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಹೊನ್ನೇನಹಳ್ಳಿ, ತಣ್ಣೇನಹಳ್ಳಿ ಹಾಗೂ ಹೊಸಕೋಟೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಒತ್ತುವರಿ ಇರುವುದರಿಂದ ಅಪಘಾತದ ಆತಂಕವೂ ಇದೆ ಎಂದು ಗ್ರಾಮಸ್ಥರು ಹೇಳಿದರು.
ಈ ಸಂದರ್ಭದಲ್ಲಿ ದೇವರಾಜು, ಕೆಂಪನರಸಿಂಹಯ್ಯ, ಮಾಜಿ ಸದಸ್ಯ ಸಿ.ಬಿ. ರಂಗಯ್ಯ, ಅಂಗಡಿ ರಾಜು, ಹನುಮಂತರಾಯಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ನರಸಿಂಹಯ್ಯ, ಹೊಸಕೋಟೆ
