ತುಮಕೂರು: ಶ್ರೀ ಸಿದ್ಧಗಂಗಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣವನ್ನಷ್ಟೇ ನೀಡದೆ, ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ನೀಡುತ್ತಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಬಿ.ಇ. ರಂಗಸ್ವಾಮಿ ಹೇಳಿದರು.
ಕಾಲೇಜಿನ ಆವರಣದಲ್ಲಿರುವ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ 23ನೇ ವರ್ಷದ ವಾರ್ಷಿಕ ಸರ್ವಸದಸ್ಯರ ಮಹಾಸಭೆ, ಸಮ್ಮಿಲನ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ಧಗಂಗಾ ಕಾಲೇಜು ಜ್ಞಾನದೇಗುಲವಾಗಿದ್ದು, ಇಲ್ಲಿನ ಗುರುಪರಂಪರೆ ಎಲ್ಲ ಕಾಲೇಜುಗಳಿಗೂ ಮೇಲ್ಪಂಕ್ತಿ ಹಾಕಿಕೊಟ್ಟಿದೆ. ಉತ್ತಮ ಗುರುಗಳು ಸಿಕ್ಕರೆ ವಿದ್ಯಾರ್ಥಿಗಳು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಸ್ವಾಮಿ ವಿವೇಕಾನಂದರಿಗೆ ರಾಮಕೃಷ್ಣ ಪರಮಹಂಸರು ಸಿಕ್ಕಂತೆ, ನಮಗೂ ಈ ಕಾಲೇಜಿನಲ್ಲಿ ಉತ್ತಮ ಅಧ್ಯಾಪಕರು ಸಿಕ್ಕಿದ್ದರಿಂದ ಉನ್ನತ ಸ್ಥಾನಕ್ಕೆ ಬರಲು ಸಾಧ್ಯವಾಯಿತು ಎಂದು ಡಾ. ರಂಗಸ್ವಾಮಿ ಹೇಳಿದರು.
ಪೂಜ್ಯ ಶ್ರೀ ಶಿವಕುಮಾರಸ್ವಾಮೀಜಿಗಳ ಆಶೀರ್ವಾದದಿಂದ ಸಿದ್ಧಗಂಗಾ ಕಾಲೇಜಿನಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ರಾಜ್ಯ ಮಾತ್ರವಲ್ಲದೆ ದೇಶ-ವಿದೇಶಗಳಲ್ಲಿಯೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಸೇವೆ ಶ್ಲಾಘನೀಯ
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಡಾ. ಹೆಚ್.ಪಿ. ವೀರಭದ್ರಸ್ವಾಮಿ, ಸಿದ್ಧಗಂಗಾ ಕಾಲೇಜು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಭಾವನೆಯನ್ನೂ ಬೆಳೆಸುತ್ತಿದೆ ಎಂದರು.
ಹಿರಿಯ ವಿದ್ಯಾರ್ಥಿಗಳ ಸಂಘ ನಡೆಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮವನ್ನು ಮಾದರಿಯಾಗಿಸಿಕೊಂಡು ತುಮಕೂರು ವಿಶ್ವವಿದ್ಯಾನಿಲಯದಲ್ಲೂ ಇಂತಹ ಕಾರ್ಯಕ್ರಮ ಆರಂಭಿಸಲಾಯಿತು. ಹಿರಿಯ ವಿದ್ಯಾರ್ಥಿಗಳ ಸಂಘವು ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಚಾಲನಾ ಪರವಾನಗಿ ಪಡೆಯಲು ನೆರವು, ಶಿಕ್ಷಣಕ್ಕೆ ಧನಸಹಾಯ, ರ್ಯಾಂಕ್ ವಿಜೇತರು, ದಿವ್ಯಾಂಗ ವಿದ್ಯಾರ್ಥಿಗಳು ಹಾಗೂ NSS, NCC ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ನಿವೃತ್ತ ಪ್ರಾಂಶುಪಾಲ ಡಾ. ಟಿ.ಬಿ. ನಿಜಲಿಂಗಪ್ಪ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾಲೇಜಿನ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದರು.
ಸ್ಮಾರ್ಟ್ ಕ್ಲಾಸ್ರೂಂ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಪ್ರಯೋಗಾಲಯಗಳಿಗೆ ಅಗತ್ಯ ಸೌಲಭ್ಯಗಳ ಕೊಡುಗೆ ಸೇರಿದಂತೆ ಹಲವು ಕಾರ್ಯಗಳ ಮೂಲಕ ಹಿರಿಯ ವಿದ್ಯಾರ್ಥಿಗಳ ಸಂಘವು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಡುವೆ ಉತ್ತಮ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಸಂಘದ ಸೇವೆಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.
23 ವರ್ಷಗಳ ಸೇವೆ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ. ಜಿ.ಆರ್. ರೇವಣ್ಣಸಿದ್ಧಪ್ಪ ಮಾತನಾಡಿ, ಹಿರಿಯ ವಿದ್ಯಾರ್ಥಿಗಳ ಸಂಘವು ಕಾಲೇಜಿನ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಏಳ್ಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ಸಂಘದ 23 ವರ್ಷಗಳ ಸುದೀರ್ಘ ಪಯಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಯಶಸ್ಸು ಸಾಧಿಸಿ ಉತ್ತಮ ವೃತ್ತಿ ಪಡೆದು ಸಮಾಜದಲ್ಲಿ ಗಣ್ಯರಾಗಿದ್ದಾರೆ. ಇನ್ನೆರಡು ವರ್ಷಗಳಲ್ಲಿ ಸಂಘವು ಬೆಳ್ಳಿಹಬ್ಬ ಆಚರಿಸಲಿದೆ. ಎಲ್ಲ ಹಿರಿಯ ವಿದ್ಯಾರ್ಥಿಗಳು ತಮ್ಮ ಬ್ಯಾಚ್ಮೇಟ್ಗಳನ್ನು ಸಂಘದ ಸದಸ್ಯರನ್ನಾಗಿ ಮಾಡಿ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಆರ್. ಬಸವರಾಜಪ್ಪ, ಕಾರ್ಯದರ್ಶಿ ಪ್ರೊ. ಲಿಂಗದೇವರಪ್ಪ ಕೆ.ಎಸ್., ಜಂಟಿ ಕಾರ್ಯದರ್ಶಿಗಳಾದ ದಿನೇಶ್ ಜಿ.ಎಂ. ಮತ್ತು ಪ್ರೊ. ಚೇತನ್ ಕುಮಾರ್ ಜಿ.ಎಂ., ಖಜಾಂಚಿ ಆಶಾರಾಣಿ ಆರ್.ಎಸ್. ಸೇರಿದಂತೆ ನಿರ್ದೇಶಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಪಲ್ಲವಿ ಪ್ರಾರ್ಥಿಸಿದರು. ಪ್ರೊ. ಮೋಹನ್ ಕುಮಾರ್ ಸ್ವಾಗತಿಸಿದರು. ಹೆಚ್.ಆರ್. ನಾಗೇಶ್ ವಂದಿಸಿದರು.
