ತಾಲೂಕಿನ ಕೋಳಾಲ ಹೋಬಳಿಯ ಸುಂಕದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ರೈತ ಕುಟುಂಬಗಳಿಗೆ ವರ್ಷಪೂರ್ತಿ ಆದಾಯ ತಂದುಕೊಡುವ ಲಾಭದಾಯಕ ಉಪಕಸುಬಾಗಿದೆ. ರೈತರು ಹಾಗೂ ಮಹಿಳೆಯರು ಜಾನುವಾರುಗಳ ಆರೈಕೆ, ಗುಣಮಟ್ಟದ ಹಾಲು ಉತ್ಪಾದನೆ ಮತ್ತು ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.

ಜಾನುವಾರುಗಳಿಗೆ ಸಮತೋಲಿತ ಮೇವು ನೀಡುವುದು, ನಿಯಮಿತ ಆರೋಗ್ಯ ತಪಾಸಣೆ ನಡೆಸುವುದು ಹಾಗೂ ಸ್ವಚ್ಛ ಹಾಲು ಉತ್ಪಾದನೆಗೆ ಆದ್ಯತೆ ನೀಡುವುದರಿಂದ ಹಾಲಿನ ಉತ್ಪಾದನೆ ಹೆಚ್ಚಿಸುವುದರ ಜೊತೆಗೆ ರೈತರ ಆದಾಯವನ್ನೂ ಹೆಚ್ಚಿಸಬಹುದು. ಇಂತಹ ಪ್ರೋತ್ಸಾಹದಿಂದ ಗ್ರಾಮೀಣ ಭಾಗದ ಮತ್ತಷ್ಟು ರೈತರು ಹಾಗೂ ಮಹಿಳೆಯರು ಹೈನುಗಾರಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದು, ಹಾಲು ಉತ್ಪಾದನೆಯೂ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟರು.
ಸಭೆಯನ್ನು ಪಿ.ಎನ್.ಕೆ. ಕೃಷ್ಣಮೂರ್ತಿ ಉದ್ಘಾಟಿಸಿದರು.

ಗ್ರಾಮೀಣ ರಸ್ತೆಗಳ ದುರಸ್ತಿಗೆ ಮನವಿ
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಪಿ.ಎನ್.ಕೆ. ಕೃಷ್ಣಮೂರ್ತಿ ಅವರ ಬಳಿ ಗ್ರಾಮದ ರಸ್ತೆ ದುರಸ್ತಿ ಹಾಗೂ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಕುರಿತು ಮನವಿ ಮಾಡಿದರು.
ತಾಲೂಕಿನ ಕೆಲವು ಪ್ರಮುಖ ರಸ್ತೆಗಳನ್ನು ಹೊರತುಪಡಿಸಿ ಬಹುತೇಕ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ಗ್ರಾಮೀಣ ಪ್ರದೇಶಗಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಸತತ ಮಳೆ, ನಿರ್ವಹಣೆಯ ಕೊರತೆ ಹಾಗೂ ಭಾರಿ ವಾಹನಗಳ ಸಂಚಾರದಿಂದ ರಸ್ತೆಗಳು ಹಾಳಾಗಿದ್ದು, ಗುಂಡಿಗಳು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿವೆ. ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳ ದುಸ್ಥಿತಿಯಿಂದ ರೈತರು ತಮ್ಮ ಜಮೀನುಗಳಿಗೆ ತೆರಳುವುದಕ್ಕೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪಿ.ಎನ್.ಕೆ. ಕೃಷ್ಣಮೂರ್ತಿ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಕುರಿತು ಉಪಮುಖ್ಯಮಂತ್ರಿ ಹಾಗೂ ಸ್ಥಳೀಯ ಶಾಸಕ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಗ್ರಾಮೀಣ ರಸ್ತೆಗಳ ದುರಸ್ತಿ ಮತ್ತು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಂಕದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ: ನರಸಿಂಹಯ್ಯ ಹೊಸಕೋಟೆ