ರಾಮನಾಥಪುರ: ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಅರ್ಧನಾರೀಶ್ವರಸ್ವಾಮಿ ದೇವಾಲಯದ ಬಳಿ ಕಾವೇರಿ ನದಿ ಸ್ವಚ್ಛತಾ ಕಾರ್ಯವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

ಈ ವರ್ಷ ಅನಾವೃಷ್ಟಿ ಪರಿಸ್ಥಿತಿ ಇದ್ದರೂ, ಕಳೆದ ತಿಂಗಳು ಕಾವೇರಿ ನದಿಯಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ದೇವಾಲಯದ ಸುತ್ತಮುತ್ತಲಿನ ನದಿ ಪಾತ್ರದಲ್ಲಿ ಹೂಳು ಹಾಗೂ ತ್ಯಾಜ್ಯ ಸಂಗ್ರಹವಾಗಿತ್ತು. 157ನೇ ಹುಣ್ಣಿಮೆಯ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ವತಿಯಿಂದ ಹೂಳು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಸ್ವಚ್ಛತಾ ಕಾರ್ಯದ ಜೊತೆಗೆ ಕಾವೇರಿ ಮಹಾ ಆರತಿ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವೂ ನಡೆಯಿತು.
ಕಾರ್ಯಕ್ರಮದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಉಪಾಧ್ಯಕ್ಷ ಆರ್.ಕೆ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಕಾಳಬೋಯಿ, ತಾಲ್ಲೂಕು ಅಧ್ಯಕ್ಷ ಸಿದ್ದರಾಜು, ಸದಸ್ಯರಾದ ಭಾಗ್ಯಮ್ಮ, ಅರುದಂತಿ, ರಮ್ಯ ಡಿ. ಸೇರಿದಂತೆ ಹಲವರು ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.

ವರದಿ : ಕುಮಾರಸ್ವಾಮಿ, ರಾಮನಾಥಪುರ
