ರಾಮನಾಥಪುರ, ಸೆ. 29: ಸುತ್ತೂರು ಜಗದ್ಗುರುಗಳ ಸಮ್ಮುಖದಲ್ಲಿ ಬೆಟ್ಟದಪುರ ಮಠದಲ್ಲಿ ರಾಜಗುರುತಿಲಕ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಆಚರಣೆ ಅಂಗವಾಗಿ ಲಿಂಗಧಾರಣೆ ಕಾರ್ಯಕ್ರಮವನ್ನು ಅಕ್ಟೋಬರ್ 6ರಂದು ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಬೆಟ್ಟದಪುರ ಮಠದ ಶ್ರೀ ಚನ್ನಬಸವದೇಶಿಕೇಂದ್ರ ಮಹಾಸ್ವಾಮೀಜಿ ತಿಳಿಸಿದರು.
ಸಲೀಲಾಖ್ಯ ಮಠ ಮತ್ತು ಕನ್ನಡ ಮಠ, ಬೆಟ್ಟದಪುರ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ, ಬಸವ ಬಳಗ ಮತ್ತು ವಿವಿಧ ವೀರಶೈವ ಲಿಂಗಾಯತ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿಯನ್ನೂ ಆಯೋಜಿಸಲಾಗಿದೆ.

ಶ್ರೀ ಶಿವರಾತ್ರೇಶ್ವರ ಧಾರ್ಮಿಕ ದತ್ತಿಯ ವತಿಯಿಂದ ಲಿಂಗಧಾರಣೆ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಚನ್ನಬಸವದೇಶಿಕೇಂದ್ರ ಮಹಾಸ್ವಾಮೀಜಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಶಿವರಾತ್ರೇಶ್ವರ ಧಾರ್ಮಿಕ ದತ್ತಿ ಮುಖ್ಯಸ್ಥರಾದ ಶ್ರೀ ಸೋಮಶೇಖರ ಸ್ವಾಮೀಜಿ, ಶ್ರೀ ಶಿವರಾತ್ರಿ ರಾಜೇಂದ್ರ ಭಕ್ತ ಬಳಗದ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಉಪಾಧ್ಯಕ್ಷ ಬಿ.ಆರ್. ಪಂಚಾಕ್ಷರಿ ಹಾಗೂ ಪುರೋಹಿತರಾದ ಸೂಳೆಕೋಟೆ ಕುಮಾರಸ್ವಾಮಿ ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
