ಚನ್ನರಾಯಪಟ್ಟಣ: ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ನವೆಂಬರ್ 26ರಂದು ಸಂವಿಧಾನ ದಿನದ ಅಂಗವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಸಚಿವರನ್ನು ಆಹ್ವಾನಿಸಲಾಗಿದೆ ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನ ರಚನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಸುಮಾರು 2 ವರ್ಷ 11 ತಿಂಗಳು 18 ದಿನಗಳ ಕಾಲ ಶ್ರಮಿಸಿ ಸಂವಿಧಾನವನ್ನು ದೇಶಕ್ಕೆ ಸಮರ್ಪಿಸಿದ್ದಾರೆ ಎಂದು ಹೇಳಿದರು.
1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಗಿದ್ದು, ಈ ದಿನವನ್ನು 2015ರಿಂದ ಸರ್ಕಾರ ಅಧಿಕೃತವಾಗಿ ಸಂವಿಧಾನ ದಿನವನ್ನಾಗಿ ಆಚರಿಸುತ್ತಿದೆ. ಇಂತಹ ಐತಿಹಾಸಿಕ ದಿನದಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡುವುದು ಸೂಕ್ತ ಎಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲಾ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಿ, ರಾಜ್ಯದ ವಿವಿಧ ಇಲಾಖೆಗಳ ಸಚಿವರು ಹಾಗೂ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದರು.
ತಾಲೂಕಿನಾದ್ಯಂತ ಇರುವ ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಬಾಲಕೃಷ್ಣ ಮನವಿ ಮಾಡಿದರು.
ಪಕ್ಷಾತೀತ, ಧರ್ಮಾತೀತ ಹಾಗೂ ಜಾತ್ಯತೀತವಾಗಿ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲೆಯ ದಲಿತಪರ, ಪ್ರಗತಿಪರ, ಕನ್ನಡಪರ, ರೈತಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಅವರು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಕಬ್ಬಾಳ್ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ
