ಚನ್ನರಾಯಪಟ್ಟಣ: ತಾಲ್ಲೂಕಿನ ಶ್ರವಣಬೆಳಗೊಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉತ್ತೇನಹಳ್ಳಿ ಯು.ಎನ್. ಚಂದ್ರು ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ಬಿ-ಫಾರಂ ನೀಡುವಂತೆ ವರಿಷ್ಠರು, ತಾಲ್ಲೂಕಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಬೆಂಬಲ ಕೋರಿದ್ದಾರೆ.
ಶ್ರವಣಬೆಳಗೊಳ ಹೋಬಳಿಯಾದ್ಯಂತ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಚಂದ್ರು, ವಿವಿಧ ಸಮಾಜಗಳ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಹಾಗೂ ದಲಿತ ಸಂಘಟನೆಗಳ ಮೂಲಕ ಅಹಿಂದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾರೆ.
ಶ್ರವಣಬೆಳಗೊಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜನರ ಸಮಸ್ಯೆಗಳು ಹಾಗೂ ಕ್ಷೇತ್ರದ ಅಗತ್ಯಗಳ ಬಗ್ಗೆ ಅರಿವು ಹೊಂದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆತರೆ ಎಲ್ಲಾ ಸಮಾಜದ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಚಂದ್ರು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ವರಿಷ್ಠರು ಬಿ-ಫಾರಂ ನೀಡುವ ಮೂಲಕ ಸ್ಪರ್ಧಿಸಲು ಅವಕಾಶ ಕಲ್ಪಿಸಿದರೆ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಮತ್ತು ಕ್ಷೇತ್ರದ ಮತದಾರರು ತಮ್ಮನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಉತ್ತೇನಹಳ್ಳಿ ಯು.ಎನ್. ಚಂದ್ರು ಮನವಿ ಮಾಡಿದ್ದಾರೆ.
– ಮಂಜುನಾಥ್ ಐ.ಕೆ.
