ಚನ್ನರಾಯಪಟ್ಟಣ: ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ, ಮಕ್ಕಳ ಅಪೌಷ್ಟಿಕತೆ, ಪೋಕ್ಸೋ ಪ್ರಕರಣಗಳು, ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಹಾಗೂ ಬರ ಪರಿಸ್ಥಿತಿಯ ನಿರ್ವಹಣೆ ಕುರಿತು ಗುರುವಾರ ನಡೆದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು.
ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಅರಣ್ಯಾಧಿಕಾರಿ ಸಹನಾ ಕುಮಾರ್ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು.

18 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ
ತಾಲೂಕಿನಲ್ಲಿ 18 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಕುರಿತು ಸಭೆಗೆ ಮಾಹಿತಿ ನೀಡಲಾಯಿತು. ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ನಿವೇಶನದ ಕೊರತೆ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.
ಕೃಷಿ, ತೋಟಗಾರಿಕೆ ಇಲಾಖೆ ಕಾರ್ಯವೈಖರಿಗೆ ಅಸಮಾಧಾನ
ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಕಾರ್ಯವೈಖರಿ ಕುರಿತು ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜತೆಗೆ, ಬರ ಪರಿಸ್ಥಿತಿಯಲ್ಲಿ ರೈತರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಅಧಿಕಾರಿಗಳು ತಲೆತಗ್ಗಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ
ತಾಲೂಕಿನಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಶಾಸಕ ಡಾ. ಸಿ.ಎನ್. ಬಾಲಕೃಷ್ಣ ಅವರ ದೂರದೃಷ್ಟಿಯ ಫಲವಾಗಿ ಸಮಸ್ಯೆ ಉಲ್ಬಣಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಹರೀಶ್ ತಿಳಿಸಿದರು.
ಬೀದಿ ನಾಯಿಗಳ ಕಡಿವಾಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆ
ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ನಿಯಂತ್ರಣಕ್ಕೆ ಟೆಂಡರ್ ಕರೆದು ಅಗತ್ಯ ಕ್ರಮ ಕೈಗೊಳ್ಳಬೇಕು. ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿ ಯಶವಂತ್ ಹೇಳಿದರು.
ಬೀದಿ ನಾಯಿ ಕಡಿತದಿಂದ ತಾಲೂಕಿನಲ್ಲಿ 400ಕ್ಕೂ ಹೆಚ್ಚು ಮಂದಿಗೆ ಚುಚ್ಚುಮದ್ದು ನೀಡಲಾಗಿದೆ ಎಂದು ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಅಕ್ಷರ ದಾಸೋಹ, ಜಿಲ್ಲಾ ಪಂಚಾಯಿತಿ, ಚೆಸ್ಕಾಂ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

– ಮಂಜುನಾಥ್ ಐ.ಕೆ.
