ರಾಮನಾಥಪುರ: ಇಲ್ಲಿನ ಚತುರ್ಯುಗಮೂರ್ತಿ ರಾಮೇಶ್ವರಸ್ವಾಮಿ ದೇವಾಲಯದ ಪಕ್ಕದಲ್ಲಿರುವ ಕಾವೇರಿ ನದಿಯ ವಹ್ನಿ ಪುಷ್ಕರಣಿಯಲ್ಲಿ ಅಕ್ಟೋಬರ್ 27ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಾವೇರಿ ಮಾತೆಗೆ ವಿಶೇಷ ಪೂಜೆ ಹಾಗೂ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ. ತಲಕಾವೇರಿಯಿಂದ ಆಗಮಿಸುವ 16ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆಯ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಸಮ್ಮತಿ ಸೂಚಿಸಿದ್ದಾರೆ ಎಂದು ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಳಬೋಯಿ ತಿಳಿಸಿದರು.
ರಾಮನಾಥಪುರದಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಸನ್ಯಾಸಿ ಸಂಘ, ಕೊಡಗು ಮತ್ತು ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದಲ್ಲಿ ಸ್ವಚ್ಛ ಕಾವೇರಿಗಾಗಿ 16ನೇ ವರ್ಷದ ಜಾಗೃತಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸೇರಿದಂತೆ ವಿವಿಧ ಸಾಧು-ಸಂತರ ಮಾರ್ಗದರ್ಶನದಲ್ಲಿ ಯಾತ್ರೆ ನಡೆಯಲಿದೆ ಎಂದರು.
ಕಾವೇರಿ ನದಿ ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರಣಗಳಿಂದ ಕಲುಷಿತಗೊಳ್ಳುತ್ತಿದ್ದು, ಜಲಮೂಲಗಳ ಸಂರಕ್ಷಣೆ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ 15 ವರ್ಷಗಳಿಂದ ತಲಕಾವೇರಿಯಿಂದ ತಮಿಳುನಾಡಿನ ಪೂಂಪುಹಾರ್ವರೆಗೆ ಜಾಗೃತಿ ಯಾತ್ರೆ ನಡೆಸಿ, ನದಿ ತಟದ ಜನರಲ್ಲಿ ನದಿ ಸಂರಕ್ಷಣೆಯ ಮಹತ್ವದ ಕುರಿತು ಅರಿವು ಮೂಡಿಸಲಾಗುತ್ತಿದೆ. ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಾಧು-ಸಂತರು ಹಾಗೂ ಕಾರ್ಯಕರ್ತರು ಸುಮಾರು ಒಂದು ತಿಂಗಳ ಕಾಲ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ನಮಾಮಿ ಕಾವೇರಿ ಯೋಜನೆ ರೂಪಿಸಲು ಆಗ್ರಹ
ಶಾಸಕ ಎ. ಮಂಜು ಮಾತನಾಡಿ, ಕಾವೇರಿ ನದಿಯ ಸ್ವಚ್ಛತೆ ಮತ್ತು ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ನದಿ ಕಲುಷಿತಗೊಳ್ಳುವುದನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನದಿ ಸ್ವಚ್ಛತೆಗಾಗಿ ಸರ್ಕಾರ ರೂಪಿಸಿರುವ ಒಳಚರಂಡಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ ಅನುಷ್ಠಾನಗೊಳಿಸಬೇಕು. ಗಂಗಾ ನದಿಯ ಸಂರಕ್ಷಣೆಗೆ ರೂಪಿಸಿರುವ ನಮಾಮಿ ಗಂಗೆ ಮಾದರಿಯಲ್ಲಿ ಕಾವೇರಿ ನದಿಗಾಗಿ ನಮಾಮಿ ಕಾವೇರಿ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ಸಂರಕ್ಷಣೆಗಾಗಿ ನದಿ ತಟದ ಜನರು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.

ಅ. 26ರಿಂದ ಯಾತ್ರೆಗೆ ಚಾಲನೆ
ಅಕ್ಟೋಬರ್ 26ರಂದು ತಲಕಾವೇರಿಯಲ್ಲಿ ಸಂಕಲ್ಪದೊಂದಿಗೆ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಅಂದು ಸಂಜೆ 4 ಗಂಟೆಗೆ ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ನಡೆಯಲಿದೆ. ಅಕ್ಟೋಬರ್ 27ರಂದು ಬೆಳಿಗ್ಗೆ 11 ಗಂಟೆಗೆ ರಾಮನಾಥಪುರದ ವಹ್ನಿ ಪುಷ್ಕರಣಿಯಲ್ಲಿ ಕಾವೇರಿ ಮಾತೆಗೆ ಮಹಾ ಆರತಿ ನೆರವೇರಲಿದೆ. ಕೊಡಗು ಜಿಲ್ಲೆಯ ಭಾಗಮಂಡಲ, ಕುಶಾಲನಗರ, ಕಣಿವೆ ಸೇರಿದಂತೆ ವಿವಿಧೆಡೆ ಆರತಿ ಕಾರ್ಯಕ್ರಮಗಳು ನಡೆಯಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ನದಿ ಸಂರಕ್ಷಣೆಯ ಅರಿವು ಮೂಡಿಸಲಾಗುತ್ತದೆ. ನವೆಂಬರ್ 18ರವರೆಗೆ ಯಾತ್ರೆ ಮುಂದುವರಿಯಲಿದ್ದು, ಅಂದು ತಮಿಳುನಾಡಿನ ಪೂಂಪುಹಾರ್ನಲ್ಲಿ ಕಾವೇರಿ ನದಿ ಬಂಗಾಳ ಕೊಲ್ಲಿಯನ್ನು ಸೇರುವ ಸ್ಥಳದಲ್ಲಿ ವಿಶೇಷ ಕಾರ್ಯಕ್ರಮದೊಂದಿಗೆ ಸಮಾರೋಪ ನಡೆಯಲಿದೆ ಎಂದು ಕಾಳಬೋಯಿ ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿಯ ಗಡಿ ಗುರುತಿಸುವ ಕಾರ್ಯ ಕೈಗೊಳ್ಳಬೇಕು. ನದಿಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ನದಿ ತಟದ ಗ್ರಾಮಗಳು ಮತ್ತು ಪಟ್ಟಣಗಳ ತ್ಯಾಜ್ಯ ನೇರವಾಗಿ ನದಿಗೆ ಸೇರುತ್ತಿರುವುದರಿಂದ ನೀರಿನ ಗುಣಮಟ್ಟ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಮಗ್ರ ಕಾರ್ಯಯೋಜನೆ ರೂಪಿಸಿ ನದಿ ನೀರಿನ ಸಂರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶೀಘ್ರದಲ್ಲೇ ಸಮಿತಿಯ ಪ್ರಮುಖರ ನಿಯೋಗವು ಕ್ಷೇತ್ರ ಶಾಸಕರ ಮೂಲಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾವೇರಿ ನದಿ ಸಂರಕ್ಷಣೆಗೆ ವಿಶೇಷ ಯೋಜನೆ ರೂಪಿಸುವಂತೆ ಮನವಿ ಸಲ್ಲಿಸಲಿದೆ ಎಂದರು.
ರಾಮನಾಥಪುರದಲ್ಲಿ 156ನೇ ಹುಣ್ಣಿಮೆ ಮಹಾ ಆರತಿ
ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಮಾತನಾಡಿ, 16ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆಯ ಸಂದರ್ಭದಲ್ಲಿ ರಾಮನಾಥಪುರದಲ್ಲಿ ಕಾವೇರಿ ಮಾತೆಗೆ 156ನೇ ಹುಣ್ಣಿಮೆ ತಿಂಗಳ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಮಿತಿಯ ಖಜಾಂಚಿ ರಘು, ಸಂಘಟನಾ ಕಾರ್ಯದರ್ಶಿ ಶಿವಪ್ಪ, ತಾಲ್ಲೂಕು ಅಧ್ಯಕ್ಷ ಸಿದ್ದರಾಜು ಹಾಗೂ ಖಜಾಂಚಿ ಕೇಶವ ಅವರು ಕಾರ್ಯಕ್ರಮಕ್ಕೆ ಸಾರ್ವಜನಿಕರ ಸಹಕಾರ ಕೋರಿದರು.
– ಕುಮಾರಸ್ವಾಮಿ ಎಂ.ಎನ್.
