ಕೆ.ಆರ್.ಪೇಟೆ, ಅ.17: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಇನ್ನು ಮುಂದೆ ಪ್ರತಿ ಶನಿವಾರ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಪ್ರಜಾಸೇವಾ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ಜನರ ಕುಂದುಕೊರತೆಗಳನ್ನು ಬಗೆಹರಿಸಬೇಕು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್ ಸೂಚಿಸಿದರು.
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿ ಕೇಂದ್ರದ ಸರ್ಕಾರಿ ಪ್ರೌಢಶಾಲಾ ಆವರಣದ ಜಯಶ್ರೀ ರಂಗಮಂದಿರದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವಾ ಕಾರ್ಯಕ್ರಮ ಸಹಕಾರಿಯಾಗಿದೆ. ಅಧಿಕಾರಿಗಳು ವಿಳಂಬ ಮಾಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ಸರ್ಕಾರಿ ನೌಕರರು ರೈತರು ಹಾಗೂ ಜನಸಾಮಾನ್ಯರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿಕೊಡಬೇಕು. ಲಂಚದ ಆಸೆಗೆ ಒಳಗಾಗದೆ ಜನರ ವಿಶ್ವಾಸ ಗಳಿಸಬೇಕು. ಕೆಲಸ ಮಾಡದ ಅಧಿಕಾರಿಗಳನ್ನು ಜನಪ್ರತಿನಿಧಿಗಳು ಪ್ರಶ್ನಿಸಿ, ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ಈ ಕಾರ್ಯಕ್ರಮ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಮಾರು 25 ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಆದೇಶ ಪತ್ರಗಳನ್ನು ಸ್ಥಳದಲ್ಲೇ ವಿತರಿಸಲಾಯಿತು. ರೈತರು ಹಾಗೂ ಸಾರ್ವಜನಿಕರಿಂದ 200ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಯಿತು. ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ರೈತರಿಗೆ ಕೃಷಿ ಪರಿಕರಗಳು ಹಾಗೂ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರೇಡ್-1 ತಹಸೀಲ್ದಾರ್ ಲೋಕೇಶ್, ಉಪ ತಹಸೀಲ್ದಾರ್ ಜೈಕುಮಾರ್, ಅಕ್ಕಿಹೆಬ್ಬಾಳು ಗ್ರಾಮ ಪಂಚಾಯಿತಿ ಪಿಡಿಒ ಜಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ. ತಿಮ್ಮೇಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಅಜಿತ್, ಡಾ. ಚೈತ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.
