ಕೊರಟಗೆರೆ: ತಾಲ್ಲೂಕಿನ ಪಾತಗನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಯುವಕರ ಬಳಗದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಕಾಂಕ್ಷಿ ಹಾಗೂ ಸಮಾಜಸೇವಕ ಪಿ.ಎನ್. ಕೃಷ್ಣಮೂರ್ತಿ ಭಾಗವಹಿಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾತೃ-ಪಿತೃ ಭಕ್ತಿ, ಸಹೋದರತ್ವ, ಕುಟುಂಬದ ಬಾಂಧವ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ರಾಮಾಯಣದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಪ್ರೀತಿ, ಶಾಂತಿ, ಸೌಹಾರ್ದತೆ ಮತ್ತು ಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿಯವರ ಸಾಧನೆ ಅನನ್ಯವಾಗಿದ್ದು, ಅವರು ರಚಿಸಿದ ರಾಮಾಯಣದ 24 ಸಾವಿರ ಶ್ಲೋಕಗಳು ಇಂದಿಗೂ ಮಾನವಕುಲಕ್ಕೆ ಮಾರ್ಗದರ್ಶಿಯಾಗಿವೆ. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಕಟ್ಟಯ್ಯ, ನಂಜುಂಡಪ್ಪ, ಚಿಕ್ಕಣ್ಣ, ನಟರಾಜ್, ಪಂಚಣ್ಣ, ಚಂದ್ರು ಸೇರಿದಂತೆ ಹಲವು ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಹರ್ಷಿ ವಾಲ್ಮೀಕಿಯವರಿಗೆ ಗೌರವ ನಮನ ಸಲ್ಲಿಸಿದರು.
ವರದಿ: ನರಸಿಂಹಯ್ಯ ಹೊಸಕೋಟೆ
