ಕೊರಟಗೆರೆ:- ತಾಲ್ಲೂಕಿನ ಕಸಬಾ ಹೋಬಳಿಯ ದಾಸರಹಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಕೊರಟಗೆರೆ–ಮಧುಗಿರಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು 60ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಅಕ್ಟೋಬರ್ 23ರಂದು ಬೆಳಗಿನ ಜಾವ 4ರಿಂದ 6 ಗಂಟೆಯ ನಡುವಿನ ಅವಧಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಥವಾ ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ತಲೆಗೆ ಹಾಗೂ ಮೈಕೈಗಳಿಗೆ ಗಂಭೀರ ಗಾಯಗಳಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಅಥವಾ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಕೊರಟಗೆರೆ ಪೊಲೀಸ್ ಠಾಣೆ ಅಥವಾ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:
ಕೊರಟಗೆರೆ ಸರ್ಕಲ್ ಇನ್ಸ್ಪೆಕ್ಟರ್: 9480802954
ಕೊರಟಗೆರೆ ಸಬ್ಇನ್ಸ್ಪೆಕ್ಟರ್: 9480802988
ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇರುವ ಸಾರ್ವಜನಿಕರು ಪೊಲೀಸರನ್ನು ಸಂಪರ್ಕಿಸಿ ಗುರುತು ಪತ್ತೆಹಚ್ಚಲು ಸಹಕರಿಸುವಂತೆ ಮನವಿ ಮಾಡಲಾಗಿದೆ.
– ಶ್ರೀನಿವಾಸ್ ಕೊರಟಗೆರೆ.
