ಚನ್ನರಾಯಪಟ್ಟಣ: ಪತ್ರಿಕಾ ಹಾಗೂ ದೃಶ್ಯ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸುದೀರ್ಘ ಸೇವೆಯನ್ನು ಗುರುತಿಸಿ ಪತ್ರಕರ್ತ ಐ.ಕೆ. ಮಂಜುನಾಥ್ ಅವರಿಗೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ನಡೆದ ಸಮಾರಂಭದಲ್ಲಿ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಳೆದ 12 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿರುವ ಮಂಜುನಾಥ್, 2014ರಲ್ಲಿ ಹಾಸನ ಪ್ರಭ ದಿನಪತ್ರಿಕೆಯ ಮೂಲಕ ವೃತ್ತಿ ಆರಂಭಿಸಿದರು. 2015ರಿಂದ ಸುವರ್ಣ ಟೈಮ್ಸ್ ಆಫ್ ಕರ್ನಾಟಕ ದಿನಪತ್ರಿಕೆಯ ಚನ್ನರಾಯಪಟ್ಟಣ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2021ರಿಂದ ನಮ್ಮ ಹಾಸನ ಟಿವಿ ನ್ಯೂಸ್ ದೃಶ್ಯ ಮಾಧ್ಯಮದಲ್ಲಿಯೂ ತಾಲೂಕು ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರ ನಿರಂತರ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ತಾಲೂಕು ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಮಾಧ್ಯಮ ವಲಯದಲ್ಲಿ ಸಂತಸ ಮೂಡಿಸಿದೆ.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜೆ.ಎಸ್. ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್, ಬಿಇಒ ಸತೀಶ್, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಎನ್. ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
