ಕೊರಟಗೆರೆ:– ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮದಲ್ಲಿ ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಶರತ್ ಕುಮಾರ್ ಅವರು, ಸರ್ಕಾರದ ವಿವಿಧ ಸೌಲಭ್ಯಗಳು ಹಾಗೂ ಇಲಾಖೆಗಳ ಸೇವೆಗಳನ್ನು ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಲು ಈ ಅಭಿಯಾನ ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 101 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಸುಮಾರು 20 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ಉಳಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿ, ಆದ್ಯತೆಯ ಮೇರೆಗೆ ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಲಾಯಿತು.

ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಅಹವಾಲು
ಅರಸಾಪುರ ಗ್ರಾಮದಲ್ಲಿ ರಸ್ತೆ ಗುಂಡಿ, ಚರಂಡಿ ಅವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ವಚ್ಛತೆ ಸೇರಿದಂತೆ ಹಲವು ಮೂಲಸೌಕರ್ಯ ಸಮಸ್ಯೆಗಳನ್ನು ಬಗೆಹರಿಸುವಂತೆ ಗ್ರಾಮಸ್ಥರು ಅಧಿಕಾರಿಗಳ ಮುಂದೆ ಅಹವಾಲು ಸಲ್ಲಿಸಿದರು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆಗಳನ್ನು ಶೀಘ್ರವಾಗಿ ಸರಿಪಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಯಮುನಾ, ಟಿಎಚ್ಒ ಜ್ಯೋತ್ಸ್ನಾ ರೆಡ್ಡಿ, ತಾಲೂಕು ಮಟ್ಟದ ಅಧಿಕಾರಿಗಳಾದ ಗಂಗಾಧರ್, ಕಲ್ಲೇಶಪ್ಪ, ಸುಧಾಕರ್, ಕಂದಾಯ ನಿರೀಕ್ಷಕ ಪ್ರತಾಪ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸಿದರು.
– ಶ್ರೀನಿವಾಸ್ ಕೊರಟಗೆರೆ.
