ರಾಮನಾಥಪುರ: ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಜನರ ಮೇಲೆ ಮತ್ತೊಂದು ಆರ್ಥಿಕ ಹೊರೆಯಾಗಿದೆ ಎಂದು ಜೆಡಿಎಸ್ ಮುಖಂಡ ಡಾ. ಮೋಹನ್ ಆರೋಪಿಸಿದರು.
ರಾಮನಾಥಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಉದ್ಯೋಗಕ್ಕೆ ತೆರಳುವ ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ ಜನರು ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಬಸ್ ಪ್ರಯಾಣ ದರ ಹೆಚ್ಚಳದಿಂದ ಇವರ ಕುಟುಂಬಗಳ ಮಾಸಿಕ ವೆಚ್ಚ ಮತ್ತಷ್ಟು ಹೆಚ್ಚಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಾರ್ವಜನಿಕ ಸಾರಿಗೆ ಜನರ ಅನುಕೂಲಕ್ಕಾಗಿ ಇರಬೇಕೇ ಹೊರತು ಜನರ ಜೇಬಿಗೆ ಹೊರೆಯಾಗಬಾರದು. ಈಗಾಗಲೇ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಜನರಿಗೆ ಸಾರಿಗೆ ದರ ಹೆಚ್ಚಳ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ ಎಂದರು.
ರಾಜ್ಯ ಸರ್ಕಾರ ಕೂಡಲೇ ಬಸ್ ಟಿಕೆಟ್ ದರ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಿ, ಜನಸಾಮಾನ್ಯರ ಹಿತದೃಷ್ಟಿಯಿಂದ ದರ ಏರಿಕೆಯನ್ನು ಹಿಂಪಡೆಯಬೇಕು. ಜನರ ಬದುಕಿನ ಆರ್ಥಿಕ ಹೊರೆ ಕಡಿಮೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಸಾರ್ವಜನಿಕರ ಧ್ವನಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ.
