ಬೆಂಗಳೂರು:
ಮಾಜಿ ಸಚಿವ ಶಿವಾನಂದ ಎಸ್. ಪಾಟೀಲ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಇದರಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ.
ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.
ಹೈಕೋರ್ಟ್ ಅಭಿಪ್ರಾಯವೇನು?
-
ಚಾರಿತ್ರ್ಯ ಹಾಗೂ ಗೌರವಕ್ಕೆ ಧಕ್ಕೆ: ಯತ್ನಾಳ್ ಅವರ ಮಾತುಗಳು ಮೇಲ್ನೋಟಕ್ಕೆ ದೂರುದಾರರ ಚಾರಿತ್ರ್ಯ ಹಾಗೂ ಗೌರವಕ್ಕೆ ಧಕ್ಕೆ ತರುವಂತಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
-
ವಿಚಾರಣಾ ನ್ಯಾಯಾಲಯದ ಕ್ರಮ ಸರಿ ಇದೆ: ಕೆಳಹಂತದ ವಿಚಾರಣಾ ನ್ಯಾಯಾಲಯವು ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಪೀಠ ಹೇಳಿದೆ.
-
ಸಾಕ್ಷ್ಯಾಧಾರಗಳ ಪರಿಶೀಲನೆ ಅಗತ್ಯ: ಆ ಹೇಳಿಕೆಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ದೂರುದಾರರ ಗೌರವಕ್ಕೆ ನಿಜಕ್ಕೂ ಕುಂದುಂಟಾಗಿದೆಯೇ ಎಂಬುದನ್ನು ವಿಚಾರಣಾ ನ್ಯಾಯಾಲಯವೇ ಸಾಕ್ಷ್ಯಾಧಾರಗಳ ಮೂಲಕ ನಿರ್ಧರಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.
ಪ್ರಕರಣದ ಹಿನ್ನೆಲೆ:
೨೦೨೫ರ ಏಪ್ರಿಲ್ ೩೦ರಂದು ಖಾಸಗಿ ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಯತ್ನಾಳ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿವಾನಂದ ಎಸ್. ಪಾಟೀಲ ಅವರು ೨೦೨೫ರ ಜುಲೈ ೧೮ರಂದು ಬೆಂಗಳೂರಿನ ೪೨ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಭಾರತೀಯ ನ್ಯಾಯ ಸಂಹಿತಾ (BNS) ೨೦೨೩ರ ಕಲಂ ೩೫೬(೨)ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ೨೦೨೬ರ ಜನವರಿ ೨೪ರಂದು ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.
