ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತುಮಕೂರು ಜಿಲ್ಲಾ ಸಮಿತಿಯನ್ನು ರಚಿಸಲಾಗಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಶಿವದರ್ಶನ್ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ನಡೆದ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳು ಹಾಗೂ ರಾಜ್ಯಾದ್ಯಂತ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು.
ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿ, ಮೂಲಸೌಕರ್ಯ ಒದಗಿಸುವಿಕೆ, ಸೂಕ್ತ ವೇತನ ಸೇರಿದಂತೆ ಪತ್ರಕರ್ತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಪತ್ರಕರ್ತರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ವಿವಿಧ ಬೇಡಿಕೆಗಳನ್ನು ತಂದು ಪರಿಹಾರಕ್ಕೆ ಒತ್ತಾಯಿಸಲಾಗುವುದು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ತಿಳಿಸಿದರು.
ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಸಮಿತಿಯನ್ನು ರಚಿಸಿ, ಸರ್ವಸದಸ್ಯರ ಒಮ್ಮತದ ಅನುಮೋದನೆಯೊಂದಿಗೆ ನೂತನ ಜಿಲ್ಲಾಧ್ಯಕ್ಷರಾಗಿ ಶಿವದರ್ಶನ್ ಅವರನ್ನು ಆಯ್ಕೆ ಮಾಡಲಾಯಿತು.
ನೂತನ ಜಿಲ್ಲಾಧ್ಯಕ್ಷ ಶಿವದರ್ಶನ್ ಮಾತನಾಡಿ, ತಾಲ್ಲೂಕು ಘಟಕದಲ್ಲಿ ಪತ್ರಕರ್ತ ಸ್ನೇಹಿತರಾದ ಮೆಡಿಕಲ್ ಕುಮಾರ್, ಸುರೇಶ್ ಎನ್. ಹಾಗೂ ನರಸಿಂಹಯ್ಯ ಅವರ ಮಾರ್ಗದರ್ಶನದಲ್ಲಿ ಎರಡು ವರ್ಷ ಕಾರ್ಯನಿರ್ವಹಿಸಿದ ಬಳಿಕ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ಜಿಲ್ಲೆಯ ಪತ್ರಕರ್ತರ ಮೂಲಭೂತ ಹಕ್ಕುಗಳ ರಕ್ಷಣೆ, ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಎಲ್ಲ ಪತ್ರಕರ್ತರನ್ನು ಒಗ್ಗೂಡಿಸಿಕೊಂಡು ಸಮನ್ವಯದೊಂದಿಗೆ ಸಂಘಟನೆಯನ್ನು ಮುನ್ನಡೆಸಲಾಗುವುದು ಎಂದರು.
ಸಭೆಯಲ್ಲಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್, ಹನುಮಂತರಾಯಪ್ಪ, ಆರ್ಟಿಒ, ಬಿ.ಜಿ. ಸಾಗರ್, ಸುರೇಶ್ ಎನ್.ಯು., ನರಸಿಂಹಮೂರ್ತಿ ವಿ.ಕೆ., ಪ್ರಸನ್ನಕುಮಾರ್ ಎಸ್., ನವೀನ್ ಕುಮಾರ್ ಕೆ.ಎಸ್., ಮೆಡಿಕಲ್ ಹನುಮಂತರಾಜು ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ: ನರಸಿಂಹಯ್ಯ ಹೊಸಕೋಟೆ
