ಕೆ.ಆರ್.ಪೇಟೆ: ಸರ್ಕಾರದ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಮಂದಗೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ‘ಬಾಗಿಲಿಗೆ ಬಂದು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಜಾಸೇವಾ ಅಭಿಯಾನ ನಡೆಯಿತು.
ಶಾಸಕ ಹೆಚ್.ಟಿ.ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಶಾಸಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹೆಚ್.ಟಿ.ಮಂಜು, ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಅಧಿಕಾರಿಗಳು ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪರಿಹಾರ ಕಲ್ಪಿಸಬೇಕು. ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ನೇರ ಸಂಪರ್ಕ ಬೆಳೆಸುವುದು, ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಪ್ರಜಾಸೇವಾ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ವೃದ್ಧರು, ಮಹಿಳೆಯರು ಹಾಗೂ ವಿಕಲಚೇತನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಪಿಂಚಣಿ, ಪಡಿತರ ಚೀಟಿ, ವಿವಿಧ ಪ್ರಮಾಣಪತ್ರ ಸೇರಿದಂತೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ಒದಗಿಸುವುದು ಈ ಅಭಿಯಾನದ ಆಶಯವಾಗಿದೆ. ಸಾರ್ವಜನಿಕರು ಕೂಡ ತಮ್ಮ ಸಮಸ್ಯೆಗಳನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ, ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಿಂಚಣಿ, ಪಡಿತರ ಚೀಟಿ, ಆಧಾರ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಖಾತೆ, ಪಹಣಿ, ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಅಧಿಕಾರಿಗಳು ಹಲವು ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಿದ್ದು, ಉಳಿದ ಅರ್ಜಿಗಳನ್ನು ಶೀಘ್ರವಾಗಿ ಪರಿಹರಿಸುವ ಭರವಸೆ ನೀಡಿದರು.
ವಿಶೇಷವಾಗಿ ವೃದ್ಧ ಮಹಿಳೆಯೊಬ್ಬರು ಕಳೆದ ಮೂರೂವರೆ ವರ್ಷಗಳಿಂದ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತಿಲ್ಲ ಎಂದು ಶಾಸಕರ ಗಮನಕ್ಕೆ ತಂದರು. ಮನವಿ ಪರಿಶೀಲಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದೇ ರೀತಿ ಹಲವು ಮಹಿಳೆಯರು ಹಾಗೂ ವಯೋವೃದ್ಧರು ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೆ ತೋಡಿಕೊಂಡರು.

ಇದೇ ಸಂದರ್ಭದಲ್ಲಿ ವಿವಿಧ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರ, ಮನೆಯ ಇ-ಸ್ವತ್ತು ದಾಖಲೆ ಪ್ರಮಾಣಪತ್ರ ಹಾಗೂ ವಿಕಲಚೇತನರ ಆದೇಶ ಪತ್ರಗಳನ್ನು ಶಾಸಕ ಹೆಚ್.ಟಿ.ಮಂಜು ವಿತರಿಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿ. ಶ್ರೇಯಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ. ಸುಷ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ. ತಿಮ್ಮೇಗೌಡ, ಕಿಕ್ಕೇರಿ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್, ಮಂದಗೆರೆ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲೇಶ್, ಉಪ ತಹಸೀಲ್ದಾರ್ ಜಯಕುಮಾರ್, ರಾಜಸ್ವ ನಿರೀಕ್ಷಕ ಗೋಪಾಲಕೃಷ್ಣ, ಗ್ರಾಮ ಆಡಳಿತ ಅಧಿಕಾರಿಗಳಾದ ದಶರಥ ಪೂಜಾರಿ, ಲೋಹಿತ್, ರಾಘವೇಂದ್ರ, ಮಧು ಛಲವಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮಸ್ಥರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
