ತುಮಕೂರು: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎನ್ಡಿಎ ಮೈತ್ರಿಕೂಟವನ್ನು ಅಧಿಕಾರಕ್ಕೆ ತರುವುದರ ಜತೆಗೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 11 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ಗುರಿಯೊಂದಿಗೆ ಜೆಡಿಎಸ್ ಪಕ್ಷವನ್ನು ಜಿಲ್ಲಾದ್ಯಂತ ಬಲಿಷ್ಠವಾಗಿ ಸಂಘಟಿಸಲು ಕಾರ್ಯಯೋಜನೆ ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಹಳ್ಳಿಹಳ್ಳಿಗೂ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುವುದಾಗಿ ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬೆಳಗುಂಬ ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ಹಾಗೂ ಇತ್ತೀಚೆಗೆ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿಯೂ ಇದೇ ರೀತಿಯ ಫಲಿತಾಂಶ ಪುನರಾವರ್ತನೆಯಾಗಲಿದ್ದು, ಎನ್ಡಿಎ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯ ಎರಡೂ ಪಕ್ಷಗಳ ಶಾಸಕರು, ಮಾಜಿ ಶಾಸಕರು ಹಾಗೂ ತಾಲ್ಲೂಕು ಮಟ್ಟದ ಮುಖಂಡರ ಸಹಕಾರ ಮತ್ತು ವಿಶ್ವಾಸದೊಂದಿಗೆ ಪರಿಶಿಷ್ಟ ಜಾತಿ ಸಮುದಾಯವನ್ನು ಜೆಡಿಎಸ್ ಪರವಾಗಿ ಸಂಘಟಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಪಕ್ಷದ ಸಂಘಟನೆಯಲ್ಲಿ ಆಸಕ್ತಿ ಹೊಂದಿರುವ ಉತ್ಸಾಹಿ ಕಾರ್ಯಕರ್ತರನ್ನು ತಾಲ್ಲೂಕು ಎಸ್ಸಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇವರು ಗ್ರಾಮಮಟ್ಟದಲ್ಲಿ ಪಕ್ಷದ ಸಂಘಟನೆಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್. ನಿಂಗಪ್ಪ, ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಡಾ. ಅನ್ನದಾನಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರ ಸಹಕಾರದೊಂದಿಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.
ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಆಕಾಂಕ್ಷಿಯಾಗಿದ್ದು, ಊರ್ಡಿಗೆರೆ ಅಥವಾ ಹೊನ್ನುಡಿಕೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉದ್ದೇಶ ಹೊಂದಿರುವುದಾಗಿ ಬೆಳಗುಂಬ ವೆಂಕಟೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜ್, ಸೋಲಾರ್ ಕೃಷ್ಣಮೂರ್ತಿ, ಭೈರೇಶ್, ರೇಖಾರಾಜ್ಗೌಡ, ಜಿಲ್ಲಾ ಮುಖಂಡ ಹಾಗೂ ನಗರ ಕಾರ್ಯಾಧ್ಯಕ್ಷ ಟಿ.ಎಸ್. ಮೋಹನ್ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಕೆ.ಬಿ. ಚಂದ್ರಚೂಡ್
