ಬೆಂಗಳೂರು, ನ. 19: ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮಾಸಿಕ ಗೌರವಧನವನ್ನು ₹15,000ಕ್ಕೆ ಹೆಚ್ಚಿಸಬೇಕು ಹಾಗೂ ನಿವೃತ್ತಿಯ ನಂತರ ₹5 ಲಕ್ಷ ಇಡುಗಂಟು ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರ ಮುಖಂಡರೊಂದಿಗೆ ಸಭೆ ನಡೆಸಿದರು. ಆದರೆ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆ ಕುರಿತು ಒಮ್ಮತ ಮೂಡದ ಕಾರಣ ಸಭೆ ವಿಫಲವಾಗಿದೆ ಎಂದು ತಿಳಿದುಬಂದಿದೆ.
ಸರ್ಕಾರದಿಂದ ಬೇಡಿಕೆಗಳ ಈಡೇರಿಕೆಗೆ ಸ್ಪಷ್ಟ ಭರವಸೆ ದೊರೆಯದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದುವರಿಸಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ತಮ್ಮ ಮಕ್ಕಳೊಂದಿಗೆ ಮಹಿಳಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಬೇಡಿಕೆಗಳು ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂಬ ನಿಲುವನ್ನು ಕಾರ್ಯಕರ್ತೆಯರು ವ್ಯಕ್ತಪಡಿಸಿದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
