ರಾಮನಾಥಪುರ, ನ. 19: ಪರಿಸರ ಸಂರಕ್ಷಣೆ, ಜೀವವೈವಿಧ್ಯತೆ ಹಾಗೂ ಸಹಬಾಳ್ವೆಯ ಸಂದೇಶ ಸಾರುವ ಉದ್ದೇಶದಿಂದ ರಾಮನಾಥಪುರ ಸಮೀಪದ ಬಿಸಲಹಳ್ಳಿ ಗ್ರಾಮದಲ್ಲಿ 400ಕ್ಕೂ ಹೆಚ್ಚು ಪ್ರಭೇದಗಳ ಸಸಿಗಳನ್ನು ನೆಟ್ಟು ಅಭಿವೃದ್ಧಿಪಡಿಸಿರುವ ‘ಸಹಬಾಳ್ವೆ ಉದ್ಯಾನವನ’ ಲೋಕಾರ್ಪಣೆ ಕಾರ್ಯಕ್ರಮ ನವೆಂಬರ್ 19ರಂದು ನಡೆಯಲಿದೆ.
ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನದ ಅಂಗವಾಗಿ ಆಯೋಜಿಸಿರುವ ಈ ಕಾರ್ಯಕ್ರಮವು ಹಲವು ಮಠಾಧೀಶರು ಹಾಗೂ ಗಣ್ಯರ ಸಾನ್ನಿಧ್ಯದಲ್ಲಿ ನೆರವೇರಲಿದೆ.

ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಸಂತೋಷ್ ಹೆಗ್ಡೆ ಹಾಗೂ ಶ್ರೀ ವಿ. ಗೋಪಾಲಗೌಡ, ಬೆಂಗಳೂರಿನ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಕೃತಿ ಸಂರಕ್ಷಣೆ, ಪರಿಸರ ಜಾಗೃತಿ ಮತ್ತು ಮಾನವೀಯ ಸಹಬಾಳ್ವೆಯ ಮೌಲ್ಯಗಳನ್ನು ಬಿಂಬಿಸುವ ಈ ಉದ್ಯಾನವನವು ಮುಂದಿನ ಪೀಳಿಗೆಗೆ ಪರಿಸರ ಪ್ರೀತಿಯ ಸಂದೇಶ ಸಾರುವ ಮಹತ್ವದ ತಾಣವಾಗಲಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರು, ಪರಿಸರಾಸಕ್ತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಸದಸ್ಯರಾದ ಕಟ್ಟೇಪುರ ವೆಂಕಟೇಶ್ ಮನವಿ ಮಾಡಿದ್ದಾರೆ.
– ಕುಮಾರಸ್ವಾಮಿ ಎಂ.ಎನ್.
