ಚನ್ನರಾಯಪಟ್ಟಣ: ತಾಲ್ಲೂಕಿನ ಬಾಗೂರು ಹೋಬಳಿಯ ಜೆಡಿಎಸ್ ಪಕ್ಷದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಗೋವಿನಕೆರೆ ಗ್ರಾಮದ ನಿವೃತ್ತ ಪಿಎಸ್ಐ ವೈರಮುಡಿಗೌಡ ಅವರನ್ನು ಪಕ್ಷದ ಮುಖಂಡರು ಹಾಗೂ ಅಭಿಮಾನಿಗಳು ಅಭಿನಂದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವೈರಮುಡಿಗೌಡ ಅವರಿಗೆ ಹೂವಿನ ಹಾರ, ಶಾಲು ಹಾಗೂ ರೇಷ್ಮೆ ಹಾರ ಹಾಕಿ ಗೌರವ ಸಲ್ಲಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವೈರಮುಡಿಗೌಡ, ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಗ್ರಾಮಮಟ್ಟದಿಂದ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯೊಂದಿಗೆ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ಮತದಾರರನ್ನು ಪಕ್ಷದತ್ತ ಸೆಳೆಯಲು ಪ್ರಯತ್ನಿಸುವುದಾಗಿ ಹೇಳಿದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹ್ಯಾಟ್ರಿಕ್ ಶಾಸಕ ಸಿ.ಎನ್. ಬಾಲಕೃಷ್ಣ ಅವರನ್ನು ನಾಲ್ಕನೇ ಬಾರಿಗೆ ಶಾಸಕರನ್ನಾಗಿ ಆಯ್ಕೆ ಮಾಡಲು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಂಘಟಿತವಾಗಿ ಶ್ರಮಿಸುವುದಾಗಿ ತಿಳಿಸಿದರು. ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಜೆಡಿಎಸ್ ಪಕ್ಷವನ್ನು ಸದೃಢವಾಗಿ ಸಂಘಟಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮನ್ನು ಗುರುತಿಸಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ ಶಾಸಕ ಸಿ.ಎನ್. ಬಾಲಕೃಷ್ಣ ಅವರಿಗೆ ಧನ್ಯವಾದ ಸಲ್ಲಿಸಿದ ಅವರು, ನೇಮಕಾತಿಗೆ ಶಿಫಾರಸು ಮಾಡಿದ ಜೆಡಿಎಸ್ ಮುಖಂಡರಾದ ಕುಂಬಾರಹಳ್ಳಿ ರಮೇಶ್, ಮರಗೂರು ಅನಿಲ್, ಗೋವಿನಕೆರೆ ರಮೇಶ್, ಕೋಟೆ ಮೋಹನ್ ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಟಿಎಪಿಎಂಎಸ್ ಮಾಜಿ ಅಧ್ಯಕ್ಷರಾದ ಕುಂಬಾರಹಳ್ಳಿ ರಮೇಶ್, ಮರಗೂರು ಅನಿಲ್ ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಕೋಟೆ ಮೋಹನ್, ಶಾಮಿಯಾನ ರಘು, ಎಂ. ಶಿವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗೋವಿನಕೆರೆ ರಮೇಶ್, ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುರೇಶ್, ಜೆಡಿಎಸ್ ಮುಖಂಡರಾದ ಹೊಂಗೇಹಳ್ಳಿ ರಾಮಕೃಷ್ಣ, ಮೇಗಲಕೆರೆ ಸುರೇಶ್ ಗೌಡ, ಕನ್ನಡ ವಾಸು, ಗೂರನಹಳ್ಳಿ ರವಿಕುಮಾರ್, ಶಾಮಿ ರಘು, ಕಲಾವಿದ ಸಿ.ಎಂ. ರವೀಂದ್ರ, ಅಬ್ದುಲ್ ಹಕ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
