ಬೆಂಗಳೂರು: ರಾಜ್ಯದಲ್ಲಿ ನಡೆಯುವ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುಭದ್ರ ಮತ್ತು ಪಾರದರ್ಶಕ ವ್ಯವಸ್ಥೆಯಡಿ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸುವ ಅಂಕಗಳ ಜತೆಗೆ ಶಾಲಾ-ಕಾಲೇಜುಗಳಲ್ಲಿ ಪಡೆದಿರುವ ಅಂಕಗಳನ್ನೂ ಪರಿಗಣಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶ ನೀಡಿಲ್ಲ ಎಂದು ತಿಳಿಸಿದರು.

ಇದೇ ವೇಳೆ ನೀಟ್ ಪರೀಕ್ಷೆಯ ಕುರಿತು ಮಾತನಾಡಿದ ಅವರು, ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ದೊರೆಯುವಂತಾಗಬೇಕು ಎಂದು ಪ್ರತಿಪಾದಿಸಿದರು. ರಾಷ್ಟ್ರಮಟ್ಟದ ನೀಟ್ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಿಸುವುದು ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಕುರಿತು ಚಿಂತನೆ ನಡೆಸಬೇಕು ಎಂದರು.
ಅಲ್ಲದೆ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್ಗಳ ಸೀಟುಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಭದ್ರತೆ ಹಾಗೂ ಸಮಾನ ಅವಕಾಶಗಳನ್ನು ಖಚಿತಪಡಿಸುವ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
