ರಾಮನಾಥಪುರ: ಪರಿಸರ ಪುನರುತ್ಥಾನ, ಜೀವವೈವಿಧ್ಯ ಸಂರಕ್ಷಣೆ ಇಂದಿನ ಅಗತ್ಯವಾಗಿದೆ. ಗಾಳಿ, ನೀರು, ಆಹಾರ ಮತ್ತು ವಾಸಸ್ಥಾನ ನೀಡುವ ಪ್ರಕೃತಿಯೇ ನಮಗೆ ಕಾಣುವ ದೇವರು ಎಂದು ಮಾಜಿ ಶಾಸಕ ಹಾಗೂ ಅರಸೀಕಟ್ಟೆ ಅಮ್ಮ ದೇವಾಲಯ ಸಮಿತಿ ಅಧ್ಯಕ್ಷ ಡಾ. ಎ.ಟಿ. ರಾಮಸ್ವಾಮಿ ತಿಳಿಸಿದರು.

ಕೊಣನೂರು ಹೋಬಳಿಯ ಬಿಸಲಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸಹಬಾಳ್ವೆ ಜೀವವೈವಿಧ್ಯ ಉದ್ಯಾನವನದಲ್ಲಿ 400ಕ್ಕೂ ಹೆಚ್ಚು ಪ್ರಭೇದಗಳ ಸಸಿಗಳನ್ನು ಬೆಳೆಸಲಾಗಿದೆ. ನವೆಂಬರ್ 26ರಂದು ಸಂವಿಧಾನ ಅಂಗೀಕಾರ ದಿನದಂದು ಉದ್ಯಾನವನ ಲೋಕಾರ್ಪಣೆಗೊಳ್ಳಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸುತ್ತೂರು
ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ್ ಹೆಗ್ಡೆ, ವಿ. ಗೋಪಾಲಗೌಡ ಹಾಗೂ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರದ್ಧಾ ಅಮಿತ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ 10 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಡಾ. ಎ.ಟಿ. ರಾಮಸ್ವಾಮಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪರಿಸರವಾದಿ ಪುರುಷೋತ್ತಮಗೌಡ, ದೇವಾಲಯ ಸಮಿತಿ ಕಾರ್ಯದರ್ಶಿ ಕೃಷ್ಣೇಗೌಡ, ಸದಸ್ಯ ಶ್ರೀನಾಥ್ ಸೇರಿದಂತೆ ಸಂಘಟನೆಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
