ರಾಮನಾಥಪುರ: ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ ಮಹನೀಯರ ಇತಿಹಾಸ ತಿಳಿದು, ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಛಲ ಮತ್ತು ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ರಾಮನಾಥಪುರದ ಶ್ರೀ ಪಟ್ಟಾಭಿರಾಮ ಪ್ರೌಢಶಾಲಾ ಆವರಣದಲ್ಲಿ ವಾಲ್ಮೀಕಿ ಸಮುದಾಯದ ವತಿಯಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯದ ಬೇಡಿಕೆಯಂತೆ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಕೊಣನೂರು–ಕಟ್ಟೇಪುರ ನಡುವಿನ ಸೇತುವೆ ನಿರ್ಮಾಣಕ್ಕೆ ₹45 ಕೋಟಿ ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದರು.
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಸಮುದಾಯದವರು ವಾಲ್ಮೀಕಿಯವರ ಆದರ್ಶಗಳನ್ನು ಅರಿತು ಹಕ್ಕುಗಳಿಗಾಗಿ ಸಂಘಟಿತರಾಗಬೇಕು ಎಂದರು.

ಶಾಸಕ ಎ. ಮಂಜು ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಲು ಸಿದ್ಧವಿರುವುದಾಗಿ ತಿಳಿಸಿದರೆ, ಸಂಸದ ಶ್ರೇಯಸ್ ಪಟೇಲ್ ಸಂಸದರ ನಿಧಿಯಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಪಿ. ಶ್ರೀಧರ್ ಗೌಡ ಸೇರಿದಂತೆ ವಿವಿಧ ಮುಖಂಡರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಸಮುದಾಯದವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
