ಕೊರಟಗೆರೆ:- ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ನಾಲ್ಕು ಅಂತಸ್ತಿನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಉದ್ಘಾಟಿಸಿದರು.
ಸುಮಾರು ₹6.50 ಕೋಟಿ ಅನುದಾನದಲ್ಲಿ ಸುಸಜ್ಜಿತವಾಗಿ ನಿರ್ಮಿಸಿರುವ ಈ ಹೈಟೆಕ್ ವಿದ್ಯಾರ್ಥಿನಿಲಯದಲ್ಲಿ ಒಟ್ಟು 102 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಅನುಕೂಲ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒಳಗೊಂಡಂತೆ ಕಟ್ಟಡವನ್ನು ನಿರ್ಮಿಸಲಾಗಿದೆ.
ವಿದ್ಯಾರ್ಥಿನಿಲಯದ ನೆಲಮಹಡಿಯಲ್ಲಿ ವಾರ್ಡನ್ ಕೊಠಡಿ, ಸುಸಜ್ಜಿತ ಅಡುಗೆಮನೆ, ವಿಶಾಲವಾದ ಊಟದ ಹಾಲ್ ಹಾಗೂ ಅನಾರೋಗ್ಯಕ್ಕೆ ಒಳಗಾಗುವ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಉಳಿದ ಮಹಡಿಗಳಲ್ಲಿ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಅನುಕೂಲವಾಗುವ ಕೊಠಡಿಗಳು, ಸ್ನಾನಗೃಹ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಇದರ ಜತೆಗೆ ಕಚೇರಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಪೂರಕ ಕಾಮಗಾರಿಗಳಿಗಾಗಿ ₹2.44 ಕೋಟಿ ವೆಚ್ಚ ಮಾಡಲಾಗಿದೆ. ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಂಡಿರುವ ವಿದ್ಯಾರ್ಥಿನಿಲಯವು ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಸೌಲಭ್ಯ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಸ್ವೀಜಾ, ತಹಶೀಲ್ದಾರ್ ಶರತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ, ಲೋಕೋಪಯೋಗಿ ಇಲಾಖೆ ಎಇಇ ದೀಪಕ್ ಯಾದವ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
